ಪ್ರವಾದಿ ಕುರಿತ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ…

45
firstsuddi

ನವದೆಹಲಿ : ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿ, ಉತ್ತರ ಪ್ರದೇಶ, ಕೊಲ್ಕತ್ತಾ, ಪಂಜಾಬ್, ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಇಂದು ಮುಸ್ಲಿಮರು ಭಾರಿ ಪ್ರತಿಭಟನೆ ನಡೆಸಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಅಟಲಾ ಪ್ರದೇಶದಲ್ಲಿ ಇಂದು ಪ್ರಾರ್ಥನೆ ಸಲ್ಲಿಸಿದ ನಂತರ ಮುಸ್ಲಿಮರು ನೂಪುರ್ ಶರ್ಮಾ ಅವರ ಬಂಧನಕ್ಕಾಗಿ ಪ್ರತಿಭಟನೆ ಆರಂಭಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟ ನಡೆದಿದೆ.

ಜಾರ್ಖಂಡ್ ನ ರಾಂಚಿಯಲ್ಲೂ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲೂ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಕೋಲ್ಕತ್ತಾದ ಪಾರ್ಕ್ ಸರ್ಕಸ್ ನಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಮರು, ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೌರಾದಲ್ಲಿಯೂ ಪ್ರತಿಭಟನೆ ನಡೆಯಿತು.