ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮತ್ತೆ ಚಂಡಮಾರುತ ಉದ್ಭವಿಸಿದ್ದು ರಾಜ್ಯದಲ್ಲಿ ನಾಳೆ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ 10 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಸುರಿಯಲಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26 ಮತ್ತು 18 ಡಿಗ್ರಿ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.










