ಉತ್ತರ ಪ್ರದೇಶ : ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ತರದ ತೀರ್ಪು ಹೊರಬಿದ್ದಿದ್ದು, ಆರೋಪಿಗಳು ನಿರ್ದೋಷಿಗಳು ಎಂದು ಲಖನೌನ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
1992ರ ಡಿಸೆಂಬರ್ 6ರಂದು ಅಯೋಧ್ಯೆಯಲ್ಲಿರುವ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಲಾಗಿತ್ತು. ಬಳಿಕ ಭುಗಿಲೆದ್ದ ಹಿಂಸಾಚಾರದಲ್ಲಿ ಸುಮಾರು 2000 ಮಂದಿ ಪ್ರಾಣ ತೆತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಖನೌನ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಲೇ ಇತ್ತು. ಈ ಬಗ್ಗೆ ಕಳೆದ ತಿಂಗಳು ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ತೀರ್ಪನ್ನು ಕೈಗೆತ್ತಿಕೊಂಡ ನ್ಯಾಯಾಲಯ ಈ ಘಟನೆ ಆರೋಪಿಗಳ ವಿರುದ್ಧ ಯಾವುದೇ ಬಲವಾದ ಸಾಕ್ಷಿಗಳು ಇಲ್ಲ. ಬಾಬ್ರಿ ಮಸೀದಿಯ ಧ್ವಂಸ ಪೂರ್ವನಿಯೋಜಿತ ಕೃತ್ಯವಲ್ಲ. ಇದು ಆಕಸ್ಮಿಕವಾಗಿ ನಡೆದಿರುವ ಘಟನೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
28 ವರ್ಷಗಳ ಬಳಿ ಇಂದು ಈ ಕುರಿತು ಅಂತಿಮ ತೀರ್ಪು ಹೊರಬಿದ್ದಿದ್ದು, ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ, ಡಾ. ಮುರಳಿ ಮನೋಹರ ಜೋಶಿ, ಉಮಾಭಾರತಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್ ಅವರು ಸೇರಿದಂತೆ ಒಟ್ಟು 32 ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಇವರು ಆರೋಪಿಗಳಲ್ಲ ಎಂದು ಕೋರ್ಟ್ ಆದೇಶ ಹೊರಡಿಸಿದೆ.










