ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಮಹಿಳೆಯನ್ನು ನಗರದ ಕಬ್ಬನ್ ಪೇಟೆ ನಿವಾಸಿ ಪುಷ್ಪಾ ಎಂದು ಗುರುತಿಸಲಾಗಿದೆ. ಪುಷ್ಪಾ ಅವರು ಮನೆಯಿಂದ ಸಮೀಪದ ಬೇಕರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಮನೆಗೆ ತೆರಳಲು ರಸ್ತೆ ದಾಟುವಾಗ ಪುಷ್ಪಾ ಅವರಿಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಪುಷ್ಪಾ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಬಸ್ ಚಾಲಕ ನಾಗರಾಜ್ನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










