ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಧರ್ಮದ ವಿಚಾರಕ್ಕೆ ಪಾಕಿಸ್ತಾನದಲ್ಲಿ ಭಿನ್ನಾಭಿಪ್ರಾಯ ಉಂಟಾದ ಸಂದರ್ಭದಲ್ಲಿ ಬಂಧಿತನು ಪಾಕಿಸ್ತಾನ ತೊರೆದು ಬಾಂಗ್ಲಾದೇಶದ ಢಾಕಾದಲ್ಲಿ ನೆಲಸಿದ್ದನು. ಢಾಕಾದಲ್ಲಿ ವಿವಾಹವಾಗಿದ್ದನು. ಬಳಿಕ ಬಂಧಿತ ಪಾಕಿಸ್ತಾನ ಪ್ರಜೆ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ 2014 ರಲ್ಲಿ ಅಕ್ರಮವಾಗಿ ದೆಹಲಿಗೆ ಬಂದಿದ್ದಾನೆ. ಅಲ್ಲಿ, ಸ್ಥಳೀಯ ವ್ಯಕ್ತಿಯ ನೆರವಿನಿಂದ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದಾನೆ. ನಂತರ, 2018ರಲ್ಲಿ ಕುಟುಂಬ ಸಮೇತ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಗೆ ಬಂದು ವಾಸವಾಗಿದ್ದಾನೆ. ಈತನ ವಿಚಾರ ತಿಳಿದ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು, ಜಿಗಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ, ಜಿಗಣಿ ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿ, ಕುಟುಂಬ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










