ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಇಂದು ಬಂದ್ಗೆ ಕರೆ ನೀಡಿವೆ. ಹೀಗಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಆದರೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ನೀಡಲಾದ ಬೆಳಗ್ಗಿನ ಉಪಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಇದನ್ನು ಕಂಡು ಪೊಲೀಸ್ ಸಿಬ್ಬಂದಿ ಹೌಹಾರಿದ್ದಾರೆ.
ಇಂದು ಬೆಳಗ್ಗೆ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭದ್ರತೆಗೆ ನಿಯೋಜಿಸಲಾಗಿದ್ದ ಯಶವಂತಪುರ ಟ್ರಾಫಿಕ್ ಪೊಲೀಸರಿಗೆ ತಂದಿದ್ದ ಉಪಾಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಉಪಹಾರವೆಂದು ರೈಸ್ ಬಾತ್ ನೀಡಲಾಗಿದೆ. ಈ ವೇಳೆ ಪೊಲೀಸ್, ಊಟದ ಪ್ಯಾಕೆಟ್ ತೆರೆದಾಗ ಅದರಲ್ಲಿ ಇಲಿ ಕಂಡು ಗಾಬರಿಯಾಗಿದ್ದಾರೆ.
ಅಲ್ಲದೇ ಇಲಿ ಸತ್ತು ಬಿದ್ದಿರುವ ಊಟಕ್ಕೆ ಪೊಲೀಸ್ ಸಿಬ್ಬಂದಿ ಆಕ್ರೋಶಗೊಂಡಿದ್ದು, ಇಂತಹ ಊಟ ತಿಂದು ಹೆಚ್ಚು ಕಡಿಮೆಯಾದ್ರೆ ಯಾರು ಹೊಣೆ ಎಂದು ಕಿಡಿಕಾರಿದ್ದಾರೆ.










