ಕಾರವಾರ: ಹಣ್ಣು, ತರಕಾರಿ ಕೊಂಡೊಯ್ಯತ್ತಿದ್ದ ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಅರಬೈಲ್ ಘಟ್ಟದ ಕಾಗೇರಿ ಪೆಟ್ರೋಲ್ ಬಂಕ್ ಬಳಿ ಇಂದು ಮುಂಜಾನೆ ಸಂಭವಿಸಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತರಕಾರಿ ತುಂಬಿಕೊಂಡು ವ್ಯಾಪಾರಸ್ಥರೊಂದಿಗೆ ಸಂತೆಗೆ ತೆರಳುತ್ತಿದ್ದ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದಿದೆ. ಮೃತರು ಹಾವೇರಿ ಜಿಲ್ಲೆ ಸವಣೂರು ಮೂಲದವರೆಂಬ ವರದಿ ದೊರೆತಿದೆ. ನಸುಕಿನ ಜಾವ ರಸ್ತೆಯಲ್ಲಿ ಮಂಜು ಮುಸುಕಿದ್ದರಿಂದ ಲಾರಿ ಪಲ್ಟಿಯಾಗಿದೆ. ಹಾವೇರಿ ಜಿಲ್ಲೆಯ ಸವಣೂರಿನಿಂದ ಕುಮಟಾದ ಸಂತೆಗೆ ತೆರಳುತ್ತಿದ್ದ ಲಾರಿಯಲ್ಲಿ 25 ಜನ ವ್ಯಾಪಾರಸ್ಥರು ತರಕಾರಿಗಳನ್ನು ತುಂಬಿಕೊಂಡು ತೆರಳುತ್ತಿದ್ದರು. ಯಲ್ಲಾಪುರದ ಅರಬೈಲ್ ಘಟ್ಟದ ಬಳಿ ಲಾರಿ ಕಂದಕಕ್ಕೆ ಉರುಳಿದೆ. ಪರಿಣಾಮ ಲಾರಿಯಲ್ಲಿದ್ದ 10 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಯಲ್ಲಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.










