ಭೀಕರ ರಸ್ತೆ ಅಪಘಾತ- ಇಬ್ಬರು ಸಾವು, ಕಾಡಸಿದ್ದೇಶ್ವರ ಸ್ವಾಮೀಜಿಗೆ ಗಾಯ…

68
firstsuddi

ಬೆಳಗಾವಿ: ಕಾರು ಮತು ಕಂಟೇನರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾಡಸಿದ್ದೇಶ್ವರ ಸ್ವಾಮೀಜಿ ಗಂಭೀರವಾಗಿ ಗಾಯಗೊಂಡಿದ್ದು, ಸ್ವಾಮೀಜಿಯ ಇಬ್ಬರು ಸೇವಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ತಾಲೂಕಿನ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ವಾಮೀಜಿ ಸೇವಕರಾದ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ದೇವಲವಾಡಿ ಗ್ರಾಮದ ನಿವಾಸಿ ಪಾಂಡುರಂಗ ಜಾಧವ್(76), ಹುಕ್ಕೇರಿ ತಾಲೂಕಿನ ಕರಕನಕಟ್ಟೆ ಗ್ರಾಮದ ನಿವಾಸಿ ಕಾರು ಚಾಲಕ ಪಂಚಾಕ್ಷರಿ ಹಿರೇಮಠ ಮೃತಪಟ್ಟವರು.

ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ತಿರ್ಮಾನಿಸಿತ್ತು. ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಸಂಘಟನೆಗಳು ಬೆಳಗಾವಿಯಲ್ಲಿ ಪ್ರತಿಭಟನೆ ಆಯೋಜಿಸಿದ್ದವು. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕಾಡಸಿದ್ದೇಶ್ವರ ಸ್ವಾಮೀಜಿ ಕಾರಲ್ಲಿ ಬೆಳಗಾವಿಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಆಗಮಿಸಿದ ಕಾಕತಿ ಪೊಲೀಸರು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ.