ಚಿತ್ರದುರ್ಗ: ಭೋವಿ ಸಮುದಾಯದ ಮುಖಂಡರಿಗೆ ಟಿಕೆಟ್ ಸಿಗದಿದ್ದಕ್ಕೆ ರಾಷ್ಟ್ರೀಯ ಪಕ್ಷಗಳ ವಿರುದ್ಧ ಭೋವಿ ಮಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗದ ಭೋವಿ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅರವಿಂದ ಲಿಂಬಾವಳಿ ಮತ್ತು ಗೂಳಿಹಟ್ಟಿ ಶೇಖರ್ ಅವರನ್ನು ಕಡೆಗಣನೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಅಖಂಡ ಶ್ರೀನಿವಾಸ್ ಅವರು ಹೆಚ್ಚಿನ ಅಂತರದಿಂದ ದಾಖಲೆಯ ಗೆಲುವು ಸಾಧಿಸಿದ್ದರು. ಆದರೆ ಈ ಎರಡು ಪಕ್ಷಗಳು ಇವರನ್ನ ಕಡೆಗಣಿಸಿದ್ದಾರೆ ಎಂದು ಸ್ವಾಮೀಜಿ ಕಿಡಿಕಾರಿದ್ದಾರೆ.
ಎರಡೂ ರಾಷ್ಟ್ರೀಯ ಪಕ್ಷದ ವರಿಷ್ಠರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೆವು. ಈ ಹಿಂದೆ 8-10 ಜನ ಬೋವಿ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಿದ್ದರು. ಆದರೆ ಈ ಬಾರಿ ಸಮುದಾಯವನ್ನು ಎರಡು ರಾಷ್ಟ್ರೀಯ ಪಕ್ಷಗಳು ಕಡೆಗಣಿಸಿವೆ. ಅರವಿಂದ ಲಿಂಬಾವಳಿ, ಗೂಳಿಹಟ್ಟಿ ಶೇಖರ್ ಗೆ ಬಿಜೆಪಿ ಹಾಗೂ ಅಖಂಡ ಶ್ರೀನಿವಾಸ್ ಗೆ ಕಾಂಗ್ರೆಸ್ ಸಾಮಾಜಿಕ ನ್ಯಾಯದಡಿ ಟಿಕೆಟ್ ನೀಡಬೇಕು ಎಂದು ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಆಗ್ರಹಿಸಿದ್ದಾರೆ. ಇಲ್ಲವಾದರೆ ಬೋವಿ ಸಮುದಾಯ ಕಡೆಗಣಿಸಿದ ಪಕ್ಷಗಳನ್ನು ನಮ್ಮ ಸಮುದಾಯ ಕೈಬಿಡಲಿದೆ ಎಚ್ಚರಿಸಿದ್ದಾರೆ.










