ಮಂಗಳೂರು: ಕನ್ನಡ ಸಾಹಿತ್ಯ ಲೋಕದ ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ ಕೆ.ಟಿ. ಗಟ್ಟಿ ಅವರು ಇಂದು ನಿಧನರಾಗಿದ್ದಾರೆ.
ಕಾಸರಗೋಡು ಜಿಲ್ಲೆಯ ಕೂಡ್ಲು ನಿವಾಸಿಯಾಗಿದ್ದ ಗಟ್ಟಿ ಅವರಿಗೆ 85 ವರ್ಷ ವಯಸ್ಸಾಗಿತ್ತು. ಉಡುಪಿಯ ಟಿ.ಎಂ.ಪೈ ಮಹಾವಿದ್ಯಾಲಯದಲ್ಲಿ ಅಧ್ಯಾಪಕರೂ ಆಗಿದ್ದ ಗಟ್ಟಿ, ಕಾದಂಬರಿ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದರು.
ಕರ್ನಾಟಕ ರಾಜ್ಯೋತ್ಸವ, ಅಕಾಡೆಮಿ ಪುರಸ್ಕಾರಗಳು ಸೇರಿದಂತೆ ಸಾಕಷ್ಟು ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿದ್ದವು. ಇಂದು ಮಧ್ಯಾಹ್ನ 3ರ ತನಕ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಸಂಜೆ ಮಂಗಳೂರಿನ ಕೆಎಂಸಿ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.
ಕೆ.ಟಿ. ಗಟ್ಟಿ ಅವರು ಶಬ್ದಗಳು (1976), ಸೌಮ್ಯ (1978), ಮನೆ, ರಾಮಯಜ್ಞ, ನಿರಂತರ, ಅಬ್ರಾಹ್ಮಣ, ಅಮುಕ್ತ, ಅವಿಭಕ್ತರು, ಕರ್ಮಣ್ಯೇ ವಾಧಿಕಾರಸ್ತೇ, ಕೂಪ, ಪೂಜಾರಿ, ಬಿಸಿಲುಗುದುರೆ, ಮೃತ್ಯೋರ್ಮಾ ಅಮೃತಂ ಗಮಯ, ಯುಗಾಂತರ, ಶಿಲಾತಪಸ್ವಿ, ಸ್ವರ್ಣಮೃಗ, ಅರಗಿನ ಮನೆ ಮುಂತಾದ ಕಾದಂಬರಿಗಳನ್ನು ಬರೆದು ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆಯನ್ನು ನೀಡಿದ್ದರು.










