ಮಂಗಳೂರು : ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರ ಬಂಧನ…

73
firstsuddi

ಮಂಗಳೂರು : ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ ನ ಅಪಾರ್ಟ್ ಮೆಂಟ್ ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ದಂಧೆಗೆ ಬಳಸಿಕೊಂಡಿದ್ದ ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.

ಬಂಧಿತರನ್ನು ಬಂಟ್ವಾಲ ವಿಟ್ಲ ಪಡ್ನೂರು ನಿವಾಸಿ ಕೆ.ಪಿ. ಹಮೀದ್ (54), ಮಂಗಳೂರು ಆಕಾಶ ಭವನ ನಿವಾಸಿ ಅನುಪಮ ಶೆಟ್ಟಿ (46) ಮತ್ತು ಕಡಬ ನಿವಾಸಿ ನಿಶ್ಮಿತ (23) ಎಂದು ಗುರುತಿಸಲಾಗಿದೆ.

ನಿನ್ನೆ ನಗರದ ಪೂರ್ವ (ಕದ್ರಿ) ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ 3 ನೇ ಕ್ರಾಸ್ ರಸ್ತೆಯಲ್ಲಿರುವ ಪಿಇಇಬಿಐ ರೆಸಿಡೆನ್ಸಿ ಎಂಬ ಆಪಾರ್ಟ್ ಮೆಂಟ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರವರ ನೇತ್ರತ್ವದ ತಂಡ ದಾಳಿ ನಡೆಸಿ ಅಕ್ರಮವಾಗಿ ಲಾಭ ಗಳಿಸುವ ಉದ್ದೇಶದಿಂದ ಹುಡುಗಿಯರನ್ನು ತರಿಸಿಕೊಂಡು ವೇಶ್ಯಾವಾಟಿಕೆ ದಂಧೆಯನ್ನು ನಡೆಸುತ್ತಿದ್ದ ದಲ್ಲಾಳಿ (ಪಿಂಪ್) ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರಿಂದ 5 ಮೊಬೈಲ್ ಫೋನುಗಳು ಹಾಗೂ 50,000 ರೂ. ನಗದು, ಮಾರುತಿ 800 ಕಾರನ್ನು ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.