ಮಕ್ಕಳು ವಿದ್ಯಾರ್ಥಿ ದೆಸೆಯಲ್ಲಿ ಕಲಿಕೆಗೆ ಮಾತ್ರ ಆದ್ಯತೆ ನೀಡಬೇಕು: ಎಚ್.ಸಿ.ರವೀಶ್

61
firstsuddi

ಚಿಕ್ಕಮಗಳೂರು: ಮಕ್ಕಳು ವಿದ್ಯಾರ್ಥಿ ದೆಸೆಯಲ್ಲಿ ಕಲಿಕೆಗೆ ಮಾತ್ರ ಆದ್ಯತೆ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಸಿ.ರವೀಶ್ ಸಲಹೆ ಮಾಡಿದರು.

ನಗರದ ವಾಸವಿ ವಿದ್ಯಾಸಂಸ್ಥೆಯಲ್ಲಿ ನಿನ್ನೆ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ದೆಸೆಯಲ್ಲಿ ಬಹಳಷ್ಟು ಆಕರ್ಷಣೆಗಳಿರುತ್ತವೆ. ನಾವು ಅವುಗಳಿಗೆ ಮನಸೋತು ಅದರತ್ತ ವಾಲಿದರೆ ನಮ್ಮ ವಿದ್ಯಾಭ್ಯಾಸ ಮೊಟಕುಗೊಂಡು ಬದುಕು ದಿಕ್ಕು ತಪ್ಪುತ್ತದೆ ಎಂದು ಎಚ್ಚರಿಸಿದರು.

ಸಂಸ್ಥೆಯ ಉಪಾಧ್ಯಕ್ಷ ಜಿ.ಎ.ದಿನೇಶ್ ಗುಪ್ತ ಮಾತನಾಡಿ, ನಾವು ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯಾರ್ಜನೆ ಮಾಡಿ ಶಿಕ್ಷಣವಂತರಾದರೆ ಮಾತ್ರ ಸಮಾಜ ನಮ್ಮನ್ನು ಗೌರವಿಸುತ್ತದೆ ಎಂದರು.

ಜಂಟಿ ಕಾರ್ಯದರ್ಶಿ ಎಂ.ಎ.ವಿನಯ್‍ಕುಮಾರ್ ಮಾತನಾಡಿ, ಬಡತನವೆಂಬ ಶತ್ರುವಿನ ವಿರುದ್ಧ ಹೋರಾಡಲು ಶಿಕ್ಷಣ ಪ್ರಬಲವಾದ ಅಸ್ತ್ರ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಪಿ.ಎಸ್.ವೆಂಕಟೇಶ್, ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯಾರ್ಜನೆ ಮಾಡುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಹೇಳಿದರು.

ಪ್ರಾಂಶುಪಾಲ ಬಿ.ಆರ್.ಕುಮಾರ್ ಶಾಲಾವಾರ್ಷಿಕ ವರದಿಯನ್ನು ಮಂಡಿಸಿದರು. ಕಳೆದ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಿ.ಸಿ.ತನ್ಮಯ ಮತ್ತು 7ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಸಿ.ಸಿ.ದೇವರಾಜ್ ಸೇರಿದಂತೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಿ ಬಹುಮಾನ ನೀಡಲಾಯಿತು.

ವಾಸವಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಜಯಂತಿ ಶೇಖರ್, ಶಿಕ್ಷಕ ರಮೇಶ್ ಬೊಂಗಾಳೆ ಉಪಸ್ಥಿತರಿದ್ದರು. ಸಮಾರಂಭದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.