ಬೆಂಗಳೂರು : ಮತದಾರರ ಪಟ್ಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಕೆ.ಆರ್.ಸರ್ಕಲ್ ಬಳಿರುವ ಚುನಾವಣಾ ಆಯೋಗದ ಕಚೇರಿಗೆ ತೆರಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಇತರೆ ಕಾಂಗ್ರೆಸ್ ನಾಯಕರು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ನೀಡಿದರು.
ದೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಚಿಲುಮೆ ಸಂಸ್ಥೆಯ ಮುಖ್ಯಸ್ಥರಾದ ರವಿಕುಮಾರ್, ಕೃಷ್ಣಪ್ಪ, ಸಮೀಕ್ಷಾ ಆ್ಯಪ್ ನ ಮಾಲೀಕರು ಸೇರಿದಂತೆ ಹಲವರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ದೂರು ಸಲ್ಲಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಮತದಾರರ ಪರಿಷ್ಕರಣೆ ಖಾಸಗಿಯವರಿಗೆ ನೀಡುವಂತಿಲ್ಲ. ಚುನಾವಣೆ ಅಧಿಕಾರಿಗಳೇ ಮತಪಟ್ಟಿ ಪರಿಷ್ಕರಣೆ ಮಾಡಬೇಕೆಂದು ಚುನಾವಣೆ ಮುಖ್ಯ ಅಧಿಕಾರಿಯವರೇ ಈ ಬಗ್ಗೆ ವಿವರಿಸಿದ್ದಾರೆ. ಡಿಲೀಟ್ ಆದ 27 ಲಕ್ಷ ಮತದಾರರ ಪಟ್ಟಿ ಪುನರ್ ಪರಿಶೀಲಿಸಿ ಎಂದು ಆಗ್ರಹಿಸಿದ್ದಾರೆ.
ಪ್ರಕರಣವು ಹೈಕೋರ್ಟ್ ಸಿಜೆ ಮಾರ್ಗದರ್ಶನದಲ್ಲಿ ತನಿಖೆ ಆಗಬೇಕು. ವೋಟರ್ ಐಡಿ ಹಗರಣದಲ್ಲಿ ಭಾಗಿಯಾದವರನ್ನು ಬಂಧಿಸಬೇಕು. ಅಕ್ರಮದಲ್ಲಿ ಭಾಗಿಯಾದವರ ಮೇಲೆ ಎಫ್ಐಆರ್ ದಾಖಲಿಸಬೇಕು. ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.










