ಶಿಗ್ಗಾಂವಿ: ಮತದಾನದ ಮುನ್ನಾದಿನ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಪ್ರತಿ ಚುನಾವಣೆಗೂ ಮುನ್ನ ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡುತ್ತಿರುವುದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಇದನ್ನು ಕೂಡಲೇ ನಿಲ್ಲಿಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ. ಪ್ರತಿ ಚುನಾವಣೆಗೆ ಸರ್ಕಾರ ಹಣ ಬಳಕೆಯಾಗುತ್ತಿರುವುದು ಸ್ಪಷ್ಟ. ಸಿಎಂ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವ, ಸಂವಿಧಾನದ ಬಗ್ಗೆ ಬಹಳ ಮಾತನಾಡುತ್ತಾರೆ. ಇಡೀ ಸರಕಾರವೇ ಸರಕಾರಿ ದುಡ್ಡಿನಲ್ಲಿ ರಾಜಕೀಯ ಭ್ರಷ್ಟಾಚಾರ ಮಾಡುತ್ತಿದೆ. ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ನಿರಂತರವಾಗಿ ನಡೆಯುತ್ತಿರುವ ಈ ಕ್ಷೇತ್ರದ ಅಭಿವೃದ್ಧಿಯನ್ನು ನೋಡಿ ಎಲ್ಲ ವರ್ಗದ ಜನರು ಈಗಾಗಲೇ ಏನು ತೀರ್ಮಾನ ಮಾಡಿದ್ದಿರಿ, ಅದನ್ನು ಯಾವುದೇ ಕಾರಣಕ್ಕೂ ಬದಲಾಯಿಸದೇ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.










