ಮಧ್ಯಪ್ರದೇಶ: ರೇವಾ ಜಿಲ್ಲೆಯಲ್ಲಿ 5ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ 12 ವರ್ಷದ ಬಾಲಕಿಯನ್ನು ವ್ಯಕ್ತಿಯೊಬ್ಬ ಅಪಹರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಆರೋಪಿ ಅಂಜನಿ ಕೇವತ್ (23) ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
5ನೇ ತರಗತಿ ವಿದ್ಯಾರ್ಥಿನಿಯಾಗಿರುವ ಆಕೆ ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಯು ತನ್ನ ಗ್ರಾಮಕ್ಕೆ ಲಿಫ್ಟ್ ನೀಡಲು ಮುಂದಾಗಿದ್ದ. ಬಳಿಕ ಕೇವತ್, ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ನಂತರ ಉತ್ತರ ಪ್ರದೇಶದ ಗಡಿಗೆ ಸಮೀಪದಲ್ಲಿರುವ ಆಕೆಯ ಗ್ರಾಮದ ಬಳಿ ಬಾಲಕಿಯನ್ನು ಬಿಟ್ಟು ಹೋಗಿದ್ದಾನೆ. ನಂತರ ಬಾಲಕಿ ತನ್ನ ಕುಟುಂಬ ಸದಸ್ಯರಿಗೆ ಹಲ್ಲೆಯ ಬಗ್ಗೆ ತಿಳಿಸಿದ್ದಾಳೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ತಿಳಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪೊಲೀಸರ ಪ್ರಕಾರ, ಬಾಲಕಿಯ ಖಾಸಗಿ ಭಾಗಗಳಿಗೆ ಗಾಯಗಳಾಗಿವೆ ಆದರೆ ಅಪಾಯದಿಂದ ಪಾರಾಗಿದ್ದಾಳೆ ಎಂದು ಹೇಳಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.










