ಮಹಿಳೆ ಜೊತೆ ಅಸಭ್ಯ ವರ್ತನೆ.. ಯುವಕರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪ್ರಕರಣ ; 7 ಮಂದಿ ವಶಕ್ಕೆ…

49
firstsuddi

ವಿಜಯಪುರ : ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಇಬ್ಬರು ಯುವಕರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪ್ರಕರಣ ಸಂಬಂಧ ಏಳು ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಜಯಪುರ ತಾಲೂಕಿನ ಹೆಗಡಿಹಾಳ ಗ್ರಾಮದಲ್ಲಿ ನಿನ್ನೆ ಈ ಘಟನೆ ನಡೆದಿತ್ತು. ದುಡಿಯಲು ಮಹಾರಾಷ್ಟ್ರಕ್ಕೆ ತೆರಳಿದ್ದ ವೇಳೆ ತಮ್ಮದೇ ತಾಂಡಾದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದರು ಎನ್ನಲಾಗ್ತಿದೆ. ಈ ವಿಷಯವನ್ನು ಮಹಿಳೆ ತಮ್ಮ ಹೆಗಡಿಹಾಳ ತಾಂಡಾದ ಜನರ ಬಳಿ ಹೇಳಿಕೊಂಡಿದ್ದಳು. ಈ ಸಂಬಂಧ ಗ್ರಾಮದ ಹಿರಿಯರು ಆ ಇಬ್ಬರು ಯುವಕರನ್ನು ಮಹಾರಾಷ್ಟ್ರದಿಂದ ತಮ್ಮ ಗ್ರಾಮಕ್ಕೆ ಕರೆಸಿಕೊಂಡಿದ್ದಾರೆ. ಬಳಿಕ ಸಭೆ ನಡೆಸಿ ಇಬ್ಬರು ಯುವಕರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿದ್ದರು.

ಈ ಸುದ್ದಿ ಕಾಡ್ಗಿಚ್ಚಿನಂತೆ ಹರಡಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ವಿಜಯಪುರ ಗ್ರಾಮೀಣ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದರು. ನಂತರ ಏಳು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.