ಬೆಂಗಳೂರು : ಮಾಜಿ ಸಚಿವ ಹಾಗೂ ಜೆಡಿಎಸ್ ನ ಹಿರಿಯ ನಾಯಕ ಅಮರನಾಥ ಶೆಟ್ಟಿ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ತಮ್ಮ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದು, “ಮಾಜಿ ಸಚಿವರು ಹಾಗೂ ನಮ್ಮ ಪಕ್ಷದ ಹಿರಿಯ ನಾಯಕರಾದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಮಾಜಿ ಸಚಿವ ಅಮರನಾಥ ಶೆಟ್ಟಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದು, ಮಾಜಿ ಸಚಿವರು ಹಾಗೂ ಮೃದು ಮನಸ್ಸಿನ ಸರಳ ರಾಜಕಾರಣಿಯಾಗಿರುವ ನಮ್ಮ ಪಕ್ಷದ ಹಿರಿಯ ಮುಖಂಡರಾದ ಅಮರನಾಥಶೆಟ್ಟಿಯವರು ವಿಧಿವಶರಾಗಿರುವುದು ತೀವ್ರ ದುಃಖ ತಂದಿದೆ.ಅವರ ನಿಧನದಿಂದ ನಾವು ಸಜ್ಜನರೊಬ್ಬರನ್ನು ಕಳೆದುಕೊಂಡಂತಾಗಿದೆ.ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಮಾಜಿ ಸಚಿವ ಅಮರನಾಥ ಶೆಟ್ಟಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, ಜಾತ್ಯತೀತ ಜನತಾ ದಳದ ಹಿರಿಯ ನಾಯಕ, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು. ಜನತಾದಳದಲ್ಲಿ ನನ್ನ ಸಹೋದ್ಯೋಗಿಯಾಗಿದ್ದ ಶೆಟ್ಟರು ತಮ್ಮ ಸರಳ-ಸಜ್ಜನಿಕೆಯ ಸ್ವಭಾವದಿಂದ ಜನಾನುರಾಗಿಯಾಗಿದ್ದರು. ಇವರ ಸಾವಿನ ಶೋಕದಲ್ಲಿರುವ ಕುಟುಂಬ ವರ್ಗದ ಜೊತೆ ನಾನೂ ಭಾಗಿಯಾಗಿದ್ದೇನೆ, ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.










