ಚಿಕ್ಕಮಗಳೂರು : ಬಿಎಸ್‍ಪಿ ನಾಯಕಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕು.ಮಾಯಾವತಿ ಅವರು ದೇಶದ ಪ್ರಧಾನಿಯಾದರೆ ಮಾತ್ರ ಅಂಬೇಡ್ಕರ್ ಅವರ ಸಂವಿಧಾನ ಯಥಾವತ್ತಾಗಿ ಜಾರಿಯಾಗುತ್ತದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಪಿ.ಪರಮೇಶ್ ಹೇಳಿದರು.
ನಗರದ ಬಿಎಸ್‍ಪಿ ಕಚೇರಿಯಲ್ಲಿ ಇಂದು ನಡೆದ ಪಕ್ಷದ ನಾಯಕಿ ಕು. ಮಾಯಾವತಿಯವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕು. ಮಾಯಾವತಿಯವರು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಆದರ್ಶ ಮತ್ತು ಸಂದೇಶಗಳನ್ನು ಮೈಗೊಂಡಿಸಿಕೊಂಡಿದ್ದಾರೆ. ಮುಖ್ಯಮಂತ್ರಿಯಾಗಿ ಉತ್ತರ ಪ್ರದೇಶದ ಅಭಿವೃದ್ಧಿಗೆ ದುಡಿದಿದ್ದಾರೆ. ಅವರು ಪ್ರಧಾನಿಯಾದರೆ ಮಾತ್ರ ಕೆಳವರ್ಗಗಳು ಮತ್ತು ಹಿಂದುಳಿದ ವರ್ಗಗಳು ಅಭಿವೃದ್ಧಿಯಾಗುತ್ತವೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಎಸ್‍ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ಕೆಳ ವರ್ಗ ಮತ್ತು ಹಿಂದುಳಿದ ವರ್ಗಗಳ ಜನ ತಮ್ಮ ಅಭಿವೃದ್ಧಿಗಾಗಿ ಮುಂಬರುವ ಚುನಾವಣೆ ಗಳಲ್ಲಿ ಬಿಎಸ್‍ಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಸಹೋದರತ್ವ ಸಮಿತಿಯ ಅಧ್ಯಕ್ಷೆ ಕೆ.ಬಿ.ಸುಧಾ, ಬಿಎಸ್‍ಪಿ ತಾಲ್ಲೂಕು ಅಧ್ಯಕ್ಷ ಹರೀಶ್ ಮಿತ್ರ, ಕಚೇರಿ ಕಾರ್ಯದರ್ಶಿ ಕೆ.ಆರ್.ಗಂಗಾಧರ್ ಮಾತನಾಡಿದರು.
ಮಾಯಾವತಿಯವರ ಜನ್ಮದಿನದ ಪ್ರಯುಕ್ತ ಪಕ್ಷದ ಕಾರ್ಯಕರ್ತರಿಗೆ ಸಿಹಿ ವಿತರಿಸಲಾ ಯಿತು. ಇತ್ತೀಚೆಗೆ ನಡೆದ ನಗರಸಭೆ ಚುನಾವಣೆಯಲ್ಲಿ ಸ್ವರ್ಧಿಸಿದ್ದ ಪಕ್ಷದ ಅಭ್ಯರ್ಥಿಗಳ ನ್ನು ಸನ್ಮಾನಿಸಲಾಯಿತು.
ಪಕ್ಷದ ಮುಖಂಡರಾದ ವಿಜಯಕುಮಾರ್, ಸೌಮ್ಯ, ಮಂಜುಳ, ಶೋಭಾ, ವಸಂತ, ನವೀನ್, ಗಿರೀಶ್, ರವಿಕುಮಾರ್, ಧನಂಜಯ ಉಪಸ್ಥಿತರಿದ್ದರು.










