ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿಗೆ ಲೋಕಾಯುಕ್ತ ಕ್ಲೀನ್ ಚಿಟ್.

35

ಮೈಸೂರು: ರಾಜ್ಯದಲ್ಲಿ ಭಾರಿ ಸುದ್ದಿಯಾಗಿದ್ದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಮತ್ತವರ ಪತ್ನಿ ಹಾಗೂ ಸಂಬಂಧಿಕರಿಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ಕಚೇರಿಗೆ ಸಲ್ಲಿಸಿದ ಅಂತಿಮ ತನಿಖಾ ವರದಿಯಲ್ಲಿ, ನಿವೇಶನ ಹಂಚಿಕೆಯಲ್ಲಿನ ಲೋಪಗಳಿಗೆ ಮುಡಾ ಅಧಿಕಾರಿಗಳು ಕಾರಣರಾಗಿದ್ದಾರೆ, ಮುಖ್ಯಮಂತ್ರಿ ಅಥವಾ ಅವರ ಪತ್ನಿ ಮತ್ತು ಸಂಬಂಧಿಕರು ಇದರಲ್ಲಿ ಯಾವುದೇ ಪಾತ್ರವಿಲ್ಲ ಎಂದು ಲೋಕಾಯುಕ್ತ ಪೊಲೀಸರು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲೇಔಟ್ ಅಭಿವೃದ್ಧಿಪಡಿಸಲು ಕೆಸಾರೆಯಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ 3.16 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಕ್ಕಾಗಿ ಪರಿಹಾರವಾಗಿ ಮುಡಾ 14 ನಿವೇಶನಗಳನ್ನು ಮಂಜೂರು ಮಾಡಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಸಿಎಂ ಪತ್ನಿ ಪಾರ್ವತಿ ಅವರಿಗೆ 14 ನಿವೇಶನಗಳನ್ನು ಮಂಜೂರು ಮಾಡಲು ಯಾವುದೇ ರಾಜಕೀಯ ಒತ್ತಡವಿರಲಿಲ್ಲ ಮತ್ತು ವಿವಿಧ ಹಂತಗಳಲ್ಲಿ ಮುಡಾ ಅಧಿಕಾರಿಗಳು ಅಕ್ರಮಗಳನ್ನು ಮಾಡಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು 2,500 ಪುಟಗಳ ವರದಿಯನ್ನು ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್ ಅವರಿಗೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ತನಿಖೆಯಲ್ಲಿ 1,000 ಕ್ಕೂ ಹೆಚ್ಚು ನಿವೇಶನಗಳನ್ನು ಮುಡಾ ಅಧಿಕಾರಿಗಳು ಅಕ್ರಮವಾಗಿ ಮಂಜೂರು ಮಾಡಿದ್ದಾರೆ, ಇದರಿಂದಾಗಿ ರಾಜ್ಯ ಬೊಕ್ಕಸಕ್ಕೆ ಭಾರಿ ನಷ್ಟವಾಗಿದೆ ಎಂದು ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ. ಸಿ ಎಂ ಪತ್ನಿ ಪಾರ್ವತಿ ಸ್ವಯಂಪ್ರೇರಣೆಯಿಂದ 14 ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದಾರೆ ಮತ್ತು ಸಿದ್ದರಾಮಯ್ಯ ಅವರು ಭೂ ವರ್ಗಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.