ಬೆಂಗಳೂರು : ಮುನಿರತ್ನ ಅವರ ವಿರುದ್ಧ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. 2018ರಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆ ವೇಳೆ ಆರ್.ಆರ್. ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮುನಿರತ್ನ ಅವರು ಅಕ್ರಮ ಎಸಗಿ ಗೆಲುವು ಸಾಧಿಸಿದ್ದಾರೆ. ಇದರಿಂದ ಅರ್ಜಿ ಇತ್ಯರ್ಥ ಆಗುವವರೆಗೆ ಕ್ಷೇತ್ರದ ಉಪ ಚುನಾವಣೆ ನಡೆಸಬಾರದು. ಚುನಾವಣೆ ವೇಳೆ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮತದಾರರ ನಕಲಿ ಗುರುತಿನ ಚೀಟಿ ಪತ್ತೆಯಾಗಿದ್ದವು. ಈ ಅಕ್ರಮದಲ್ಲಿ ಮುನಿರತ್ನ ಅವರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗೆ ಹತ್ತಿರದ ಪ್ರತಿಸ್ಪರ್ಧಿಯಾಗಿದ್ದ ನನ್ನನ್ನು ಜಯಶಾಲಿ ಎಂದು ಘೋಷಿಸಬೇಕು ಎಂದು ತುಳಸಿ ಮುನಿರಾಜುಗೌಡ ಅವರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್ ತುಳಸಿ ಮುನಿರಾಜು ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.










