ಮೂರು ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ – ರಾಜಕೀಯ ನಾಯಕರ ಪ್ರತಿಕ್ರಿಯೆ ಏನು?

98
firstsuddi

ಬೆಂಗಳೂರು : ಕೇಂದ್ರ ಸರ್ಕಾರದ ಮೂರು ಕೃಷಿ ತಿದ್ದುಪಡಿ ಕಾಯ್ದೆಗೆ ರೈತರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಕೃಷಿ ಕಾಯ್ದೆಯನ್ನು ಹಿಂಪಡೆದಿದೆ. ಈ ಕುರಿತು ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜಕೀಯ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ಸರ್ಕಾರ ವಿವಾದಿತ 3 ಕೃಷಿ ಕಾಯ್ದೆ ವಾಪಸ್ ಪಡೆದಿದ್ದು, ಮಾಜಿ ಪ್ರಧಾನಿ ದೇವೇಗೌಡ ಟ್ವೀಟ್ ಮಾಡಿ ಕೇಂದ್ರದ ನಿರ್ಧಾರಕ್ಕೆ ಸ್ವಾಗತ ಕೋರಿದ್ದಾರೆ. ನಾನು ಪ್ರಧಾನಿಯನ್ನು ಸ್ವಾಗತಿಸುತ್ತೇನೆ. ರೈತರ ಹೋರಾಟಕ್ಕೆ ಬೆಲೆ ಕೊಟ್ಟ ಸರ್ಕಾರದ ನಿರ್ಧಾರ ಸ್ವಾಗತ ಮಾಡೋದಾಗಿ ಟ್ವೀಟ್ ಮಾಡಿ ಶುಭ ಕೊರಿದ್ದಾರೆ.

ಕೃಷಿ ಕಾಯ್ದೆ ವಾಪಸ್ ಪಡೆದ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯುಪಿಎ ಅವಧಿಯಲ್ಲಿ ಜಾಗತೀಕರಣ, ಉದಾರೀಕರಣ ಆದ ಮೇಲೆ ಹೊಸ ಕಾಯ್ದೆ ಬಂದಿವೆ. ಯುಪಿಎ ಸರ್ಕಾರದಲ್ಲಿ ಕರಡು ಇತ್ತು. ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆದು ಜಾರಿ ಮಾಡಲಾಗಿತ್ತು. ಪಂಜಾಬ್, ಹರಿಯಾಣದ ರೈತರು ವಿರೋಧ ಮಾಡಿದ್ರು. ಪ್ರಧಾನಿಗಳು ಈಗ ಕಾಯ್ದೆ ವಾಪಸ್ ಪಡೆಯುತ್ತೇವೆ ಅಂತ ಹೇಳಿದ್ದಾರೆ. ಇದು ಸ್ಪಂದನಾಶೀಲ ಸರ್ಕಾರ ಇದು. ಹೀಗಾಗಿ ರೈತರ ಭಾವನೆಗೆ ಬೆಲೆ ಕೊಟ್ಟಿದ್ದೇವೆ. ಇದಕ್ಕೂ ಪಂಚರಾಜ್ಯ ಚುನಾವಣೆಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾನೂನು ವಾಪಸ್ ಪಡೆದುಕೊಂಡಿರುವ ಕುರಿತಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಲು ಸಾಲು ಟ್ವೀಟ್ ಮಾಡುವ ಮೂಲಕವಾಗಿ ರೈತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ. ಕೃಷಿಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೃಷಿ ಕಾಯ್ದೆಯಷ್ಟೇ ಅಲ್ಲ, ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ, ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ಕಾಯಿದೆ ಹಿಂಪಡೆದ ಬಳಿಕ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಅವರು, ಈ ಐತಿಹಾಸಿಕ ತೀರ್ಮಾನವನ್ನು ಈಗ ತೆಗೆದುಕೊಂಡಿದ್ದಾರೆ. ರೈತ ಸಮೂಹಕ್ಕೆ ಒಂದು ಒಳ್ಳೆಯ ತೀರ್ಮಾನದ ಮೂಲಕ ಖುಷಿ ಕೊಟ್ಟಿದ್ದಾರೆ. ಕೃಷಿ ಕಾಯ್ದೆ ಹೋರಾಟದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇವೆ. ಚುನಾವಣೆ ಆಧಾರದ ಮೇಲೆ ಈ ನಿರ್ಧಾರ ಕೈಗೊಂಡಿಲ್ಲ. ಆ ಸಂದರ್ಭದಲ್ಲಿ ಏನೆಲ್ಲಾ ಆಯ್ತು ಎನ್ನುವುದು ಬೇರೆ. ಆದರೆ ಒಣ ಪ್ರತಿಷ್ಠೆಗೆ ಒಳಗಾಗದೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರ್ ನಲ್ಲಿ, ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ ಮತ್ತು ಈಗ ಏಕಾಏಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ. ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ, ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನಧಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು.

ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಃ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು. ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ ಎಂದು ತಿಳಿಸಿದ್ದಾರೆ.

ಇನ್ನೂ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ. ಇದು ದೇಶದ ಅನ್ನದಾತ ಮತ್ತು ಕಾಂಗ್ರೆಸ್ ನ ಹೋರಾಟಕ್ಕೆ ಸಂದ ಚಾರಿತ್ರಿಕ ಜಯ. ಈ ಹೋರಾಟದಲ್ಲಿ 600ಕ್ಕೂ ಹೆಚ್ಚು ರೈತರು ಪ್ರಾಣ ತ್ಯಾಗ ಮಾಡಿದ್ದು, ಕೇಂದ್ರ ಸರ್ಕಾರ ಇದೀಗ ಅನ್ನದಾತನ ಮುಂದೆ ಮಂಡಿಯೂರಿದೆ. ದೇಶದ ಅನ್ನದಾತನನ್ನು ಎದುರುಹಾಕಿಕೊಂಡು ಉಳಿದವರಿಲ್ಲ. ಅಂದು ಬ್ರಿಟೀಷರು ರೈತರ ಮೇಲೆ ದಬ್ಬಾಳಿಕೆ ನಡೆಸಿ ದೇಶದಿಂದ ಕಾಲ್ಕಿತ್ತರು. ಇಂದು ಬಿಜೆಪಿ ಅದೇ ತಪ್ಪು ಮಾಡಿ ಬುದ್ಧಿ ಕಲಿತಿದೆ ಎಂದು ಶಿವಕುಮಾರ್ ಅವರು ಹೇಳಿದ್ದಾರೆ.