ಮೂಲ ಸೌಕರ್ಯವನ್ನು ಕಲ್ಪಿಸಲಾಗಿಲ್ಲ ಎಂದು ಮತಯಂತ್ರ ಧ್ವಂಸ ಮಾಡಿದ ಗ್ರಾಮಸ್ಥರು, ಪೊಲೀಸರಿಂದ ಲಾಠಿ ಚಾರ್ಜ್…

65
firstsuddi

ಚಾಮರಾಜನಗರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಿರುವ ಘಟನೆ ನಡೆದಿದೆ.

ಮೂಲ ಸೌಕರ್ಯವನ್ನು ಕಲ್ಪಿಸಲಾಗಿಲ್ಲ ಎಂದು ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಜನರು ಮತದಾನ ಬಹಿಷ್ಕರಿಸಿ ಮತದಾನದಿಂದ ದೂರ ಉಳಿದುಕೊಂಡಿದ್ದಾರೆ. ಆದ್ರೆ, ಹಾಡಿ ಜನರನ್ನು ಮನವೊಲಿಸಿ ಕರೆತಂದು ಮತದಾನ ಮಾಡಿಸಲು ಅಧಿಕಾರಿಗಳು ಮತಗಟ್ಟೆಗೆ ಕರೆದುಕೊಂಡು ಬಂದಿದ್ದಾರೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಇಂಡಿಗನತ್ತ ಗ್ರಾಮದ ಮತಗಟ್ಟೆಯನ್ನು ಸುತ್ತುವರಿದಿದ್ದು, ಮೂಲಸೌಕರ್ಯ ಕಲ್ಪಿಸುವವರೆಗೆ ಮತದಾನ ಮಾಡಬೇಡಿ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಇದರಿಂದ ಪೊಲೀಸರು ಜನರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿದ್ದು, ಮೇಜು, ಕುರ್ಚಿ, ಇವಿಎಂ ಧ್ವಂಸಮಾಡಿದ್ದಾರೆ.

ಇನ್ನು ಘಟನೆಯಲ್ಲಿ ಚುನಾವಣಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹನೂರು ತಹಸೀಲ್ದಾರ್ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.