ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಕ್ರಿಮಿನಲ್ ಕೇಸ್.

41

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ವೇಳೆ ಕಿರುಕುಳ ನೀಡುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂಪಾಯಿ ಸಾಲ ನೀಡಿವೆ. ಒಬ್ಬ ವ್ಯಕ್ತಿಗೆ 2 ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್‍ಬಿಐ ಮಾರ್ಗಸೂಚಿ ಇದೆ. ಇದನ್ನು ಯಾರೂ ಅನುಸರಿಸುತ್ತಿಲ್ಲ. ಒಬ್ಬ ವ್ಯಕ್ತಿಗೆ 5 ರಿಂದ 6 ಲಕ್ಷ ರೂಪಾಯಿ ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ಮರುಪಾವತಿ ಮಾಡದಿದ್ದರೆ ಮೈಕ್ರೋ ಫೈನಾನ್ಸ್ ಕಂಪನಿಗಳ ಅಸ್ತಿತ್ವಕ್ಕೂ ತೊಂದರೆಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಅನ್ವಯ, ಮೈಕ್ರೋ ಫೈನಾನ್ಸ್ ಕಂಪನಿ ಸಾಲ ವಸೂಲಿ ಮಾಡುವ ಸಂದರ್ಭದಲ್ಲಿ ಕೆಲವರು ಅತಿರೇಕ ಮಾಡುತ್ತಿದ್ದಾರೆ. ಈ ಕುರಿತು ಡಿಸಿ ಹಾಗೂ ಎಸ್‍ಪಿ ಅವರು ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳ ಸಭೆ ಕರೆದು, ಸಾಲ ವಸೂಲಾತಿಗೆ ಆರ್‍ಬಿಐ ನಿಯಮಗಳನ್ನು ಪಾಲನೆ ಮಾಡಲು ಹಾಗೂ ಬೇಜಾಬ್ದಾರಿಯಿಂದ ಸಾಲ ನೀಡುವುದನ್ನೂ ನಿಗ್ರಹಿಸಬೇಕೆಂದು ಸೂಚನೆ ನೀಡಿದರು.