ಬೆಂಗಳೂರು : ಮೈ ಶುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕಾರ್ಖಾನೆ ಪುನಃಶ್ಚೇತನಕ್ಕೆ ತಕ್ಷಣವೇ ತಜ್ಞರ ಸಮಿತಿ ನೇಮಕ ಮಾಡಲಾಗುವುದು. ಮೂರು ತಿಂಗಳಲ್ಲಿ ತಜ್ಞರ ಸಮಿತಿ ವರದಿ ನೀಡಲಿದೆ. ಕಾರ್ಖಾನೆಯ ಪುನಃಶ್ಚೇತನಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗುವುದು. ಮುಂದಿನ ವರ್ಷದಿಂದ ಕಬ್ಬು ನುರಿಸಲು ಬೇಕಾದ ಎಲ್ಲ ವ್ಯವಸ್ಥೆ ಮಾಡಲಾಗುವುದು. ತಕ್ಷಣ ಮೈ ಶುಗರ್ ಕಾರ್ಖಾನೆಗೆ ಎಂಡಿ ನೇಮಕ, ಅಗತ್ಯ ಹಣ ಬಿಡುಗಡೆ ಹಾಗೂ ಬೇಕಾದ ಎಲ್ಲಾ ಯಂತ್ರೋಪಕರಣ ರಿಪೇರಿಗೆ ಹಣ ಬಿಡುಗಡೆ ಮಾಡಲಾಗುತ್ತದೆ ಎಂದರು.
ಮೈ ಶುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸುವ ಪ್ರಸ್ತಾವವನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ. ಎರಡು ವರ್ಷಗಳ ಕಾಲ ಸರ್ಕಾರದ ನಿರ್ವಹಣೆಯಲ್ಲಿ ದೊರೆಯುವ ಫಲಿತಾಂಶ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ರೈತರಿಗೆ ತೊಂದರೆ ಆಗಬಾರದು ಎಂಬ ಸದುದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಕಾರ್ಖಾನೆ ಆರಂಭಕ್ಕೆ ತಕ್ಷಣದಿಂದಲೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.










