ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ನವೆಂಬರ್ 14 ರಿಂದ 20 ರವರೆಗೆ ನಗರದ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮೂರನೇ ಆವೃತ್ತಿಯ ಮಿನಿ ಒಲಿಂಪಿಕ್ಸ್ ಆಯೋಜಿಸಲು ಸಜ್ಜಾಗಿದೆ. ಮಾಧ್ಯಮಮಿತ್ರರೊಂದಿಗೆ ಮಾತನಾಡಿದ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂಎಲ್ಸಿ ಡಾ.ಕೆ.ಗೋವಿಂದರಾಜ್ ಅವರು, ಮಿನಿ ಒಲಿಂಪಿಕ್ಸ್ನ ಮೊದಲ ಆವೃತ್ತಿಯನ್ನು 2020 ರಲ್ಲಿ ನಡೆಸಲಾಗಿದ್ದು, ದೇಶದಲ್ಲೇ ಮಿನಿ ಒಲಿಂಪಿಕ್ಸ್ ಆರಂಭಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ. ನಮ್ಮಲ್ಲಿರುವ ಪ್ರತಿಭೆಗಳಿಗೆ ವೇದಿಕೆ ಒದಗಿಸಿ, ಅವರನ್ನು ಗುರುತಿಸುವ ಮೂಲಕ ರಾಜ್ಯ, ರಾಷ್ಟ್ರ ಮಟ್ಟದ ಸ್ಪರ್ಧೆಗಳಿಗೆ ತಯಾರು ಮಾಡುವ ಕೆಲಸವನ್ನು ಮಾಡಲಾಗುತ್ತಿದೆ. ರಾಜ್ಯದ ಹೆಚ್ಚೆಚ್ಚು ಕ್ರೀಡಾಪಟುಗಳು ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳುವಂತೆ ಆಗಬೇಕು ಎನ್ನುವುದೇ ಈ ಕ್ರೀಡಾಕೂಟದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು. ಕರ್ನಾಟಕ ಮಿನಿ ಒಲಂಪಿಕ್ಸ್ ನ ಮೂರನೇ ಆವೃತ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತರ ಗಣ್ಯರು ಮತ್ತು ಮಂತ್ರಿಗಳೊಂದಿಗೆ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಉದ್ಘಾಟಿಸಲಿದ್ದಾರೆ. ಟೂರ್ನಿಯಲ್ಲಿ ರಾಜ್ಯದ 14 ವಯೋಮಿತಿಯ 4 ಸಾವಿರಕ್ಕೂ ಅಧಿಕ ಮಕ್ಕಳು ಭಾಗವಹಿಸಲಿದ್ದು, ಗುಂಪು ಸಹಿತ 24 ವಿವಿಧ ಕ್ರೀಡೆಗಳು ಮತ್ತು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿವೆ ಎಂದು ತಿಳಿಸಿದರು.










