ರಸ್ತೆ ಮಧ್ಯದಲ್ಲೇ ಹೊತ್ತಿ ಹುರಿದ ಕೆ.ಎಸ್.ಆರ್.ಟಿ.ಸಿ. ವೋಲ್ವೊ ಬಸ್…

763
firstsuddi

ಚಿತ್ರದುರ್ಗ : ಕೆ.ಎಸ್.ಆರ್.ಟಿ.ಸಿ. ವೋಲ್ವೊ ಬಸ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗಿಡ್ಡೋಬನಹಳ್ಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಬಸ್‍ನಲ್ಲಿ 39 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬೆಂಕಿಯಿಂದ ವಸ್ತುಗಳು ಸುಟ್ಟು ದುರ್ವಾಸನೆ ಬರುತ್ತಿದ್ದರಿಂದ ಪ್ರಯಾಣಿಕರು ಕೂಡಲೇ ಚಾಲಕನಿಗೆ ತಿಳಿಸಿದ್ದಾರೆ. ವಿಷಯ ತಿಳಿದು ಚಾಲಕ ಬಸ್ ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಬೆಂಕಿ ಹೊತ್ತಿಕೊಂಡಿರುವುದು ಬೆಳಕಿಗೆ ಬಂದಿದ್ದು, ಕೂಡಲೆ ಪ್ರಯಾಣಿಕರೆಲ್ಲರು ಬಸ್‍ನಿಂದ ಕೆಳಗೆ ಇಳಿದಿದ್ದಾರೆ. ಬೆಂಕಿ ಕಾಣಿಸಿಕೊಂಡ ಕೆಲ ಹೊತ್ತಿನಲ್ಲೇ ಬಸ್ ಸಂಪೂರ್ಣ ಹೊತ್ತಿ ಉರಿದಿದ್ದು, ಅದೃಷ್ಟಾವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.