ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ರಸ್ತೆ ನಾಮಕರಣಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕೃತ ಅನುಮೋದನೆ ನೀಡಿದೆ. ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ರಸ್ತೆಯ ವೆಗಾಸಿಟಿ ಮಾಲ್ ಜಂಕ್ಷನ್ ವರೆಗಿನ 12 ಕಿ.ಮೀ. ಉದ್ದದ ವರ್ತುಲ ರಸ್ತೆಗೆ ಪುನೀತ್ ರಾಜ್‍ಕುಮಾರ್ ರಸ್ತೆ ಎಂದು ನಾಮಕರಣಕ್ಕೆ ಅನುಮೋದನೆ ನೀಡಲಾಗಿದೆ.
ಪುನೀತ್ ಹೆಸರು ನಾಮಕರಣ ಮಾಡುವಂತೆ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್, ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಮತ್ತು ಆಡಳಿತಾಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಿದ್ದರು. ಅಲ್ಲದೇ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ವರ್ತುಲ ರಸ್ತೆಗೆ ನಾಮಕರಣ ಮಾಡಬೇಕೆಂದು ಬಿಬಿಎಂಪಿಗೆ 700ಕ್ಕೂ ಹೆಚ್ಚು ಪುನೀತ್ ಅಭಿಮಾನಿಗಳು ಸಹಿ ಮಾಡಿದ ಮನವಿ ಪತ್ರ ನೀಡಿದ್ದರು. ಇದೀಗ ಆಡಳಿತಾಧಿಕಾರಿ ರಾಕೇಶ್ ಸಿಂಗ್ 12 ಕಿ.ಮೀ. ಉದ್ದದ ವರ್ತುಲ ರಸ್ತೆಗೆ ಪುನೀತ್ ರಾಜ್‍ಕುಮಾರ್ ರಸ್ತೆ ಎಂದು ನಾಮಕಾರಣ ಮಾಡುವ ಬಗ್ಗೆ ನಿರ್ಣಯ ಕೈಗೊಂಡು ಅಧಿಕೃತ ಅನುಮೋದನೆ ನೀಡಿದ್ದಾರೆ.










