ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ ಅವರು ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು. ಖಾಸಗಿ ಹೊಟೇಲ್ ನಲ್ಲಿ ನಡೆದ ಸಮಾರಂಭದಲ್ಲಿ ಟೆನ್ನಿಸ್ ಕೃಷ್ಣ ಅವರನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಬರಮಾಡಿಕೊಂಡರು.
ಎಎಪಿ ಸೇರ್ಪಡೆ ಬಳಿಕ ಮಾತನಾಡಿದ ಟೆನ್ನಿಸ್ ಕೃಷ್ಣ, ಅಧಿಕಾರಕ್ಕಾಗಿ ಪಕ್ಷಕ್ಕೆ ಸೇರಿಲ್ಲ. ಜನಸೇವೆಯಾಗಿ ಸೇರಿದ್ದೇನೆ. ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್ ಆದ್ಮಿ ಪಕ್ಷ ಯಶ್ವಸಿಯಾಗುತ್ತಿದೆ. ಭ್ರಷ್ಟ ಪಕ್ಷಗಳನ್ನು ಬದಿಗೊತ್ತಿ ದೇಶವನ್ನು ಕಾಪಾಡಲು ಎಎಪಿಯಿಂದ ಮಾತ್ರ ಸಾಧ್ಯ. ಸಾಮಾನ್ಯ ಜನರ ಬಗ್ಗೆ ಅಪಾರ ಕಾಳಜಿಯುಳ್ಳ ಆಮ್ ಆದ್ಮಿ ಪಾರ್ಟಿಯ ಮೂಲಕ ರಾಜಕೀಯ ಪ್ರವೇಶಿಸುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದು ಹೇಳಿದ್ದಾರೆ.










