ನವದೆಹಲಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಮತ್ತು ಇತರ ಐವರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಇಂದು ಆದೇಶಿಸಿದೆ.
ಅವಧಿಗೆ ಮೊದಲೇ ತಮ್ಮನ್ನು ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಕೋರಿ ರಾಜೀವ್ ಗಾಂಧಿ ಹಂತಕರು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಗೆ ತಮಿಳುನಾಡು ಸರ್ಕಾರ ಬೆಂಬಲ ನೀಡಿದೆ. ತಮ್ಮ ಸಹ ಅಪರಾಧಿ ಎಜಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಿದಂತೆ ತಮ್ಮನ್ನೂ ಬಿಡುಗಡೆ ಮಾಡುವಂತೆ ಕೋರಿ ನಳಿನಿ ಶ್ರೀಹರನ್ ಮತ್ತು ಆರ್ ಪಿ ರವಿಚಂದ್ರನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನಿ, ಸಂತನ್, ಮುರುಗನ್, ಎಜಿ ಪೆರಾರಿವಾಲನ್, ರಾಬರ್ಟ್ ಪಯಸ್, ಜಯಕುಮಾರ್, ಮತ್ತು ರವಿಚಂದ್ರನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, 23 ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದಾರೆ.
ರಾಜೀವ್ ಗಾಂಧಿಯವರು 1991ರ ಮೇ 21ರ ರಾತ್ರಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ‍್ಯಾಲಿಯಲ್ಲಿ ತಮಿಳು ಟೈಗರ್ಸ್ ಎಲ್ ಟಿಟಿಇ ಗುಂಪಿನ ಮಹಿಳಾ ಆತ್ಮಾಹುತಿ ಬಾಂಬರ್ ನಿಂದ ಹತ್ಯೆಗೀಡಾಗಿದ್ದರು.










