ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ತಯಾರಿಕೆಗೆ ಕೃತಕ ಬಣ್ಣ ಬಳಕೆ ನಿಷೇಧಿಸಿದ ರಾಜ್ಯ ಸರ್ಕಾರ.

44
firstsuddi

ಬೆಂಗಳೂರು: ಸಾರ್ವಜನಿಕರ ಮತ್ತು ಗ್ರಾಹಕರ ಆರೋಗ್ಯದ ಮೇಲಿನ ದುಷ್ಪರಿಣಾಮದ ಹಿನ್ನೆಲೆ ರಾಜ್ಯದಲ್ಲಿ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬೆರೆಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ.

ವಿಕಾಸಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಗಳ ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಿಂದ ಕೂಡಿದೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಲಾಗಿದೆ. ಸದ್ಯ ಪರೀಕ್ಷೆಯ ವರದಿ ಬಂದ ಹಿನ್ನೆಲೆ ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ವಿವರ ನೀಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಮಾದರಿಗಳನ್ನು ಸಂಗ್ರಹಿಸಲಾಗಿತ್ತು.
ರಾಜ್ಯದಲ್ಲಿ 171 ಗೋಬಿ ಮಂಚೂರಿಯನ್ ಸ್ಯಾಂಪಲ್ ಸಂಗ್ರಹಿಸಿದ್ದು, ಅದರಲ್ಲಿ 107 ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಪತ್ತೆಯಾದವು. ಟಾರ್ಟ್ರಾಸೈನ್ ಸನ್ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಎಂಬ ರಾಸಾಯನಿಕಗಳು ಇದರಲ್ಲಿ ಕಂಡುಬಂದಿವೆ ಎಂದು ಸಚಿವರು ವಿವರಿಸಿದರು.

ಕಾಟನ್ ಕ್ಯಾಂಡಿಗೆ ಸಂಬಂಧಿಸಿದಂತೆ 25 ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅದರಲ್ಲಿ 15ರಲ್ಲಿ ಕೃತಕ ಬಣ್ಣಗಳನ್ನು ಬಳಸಿರುವುದು ಪತ್ತೆಯಾಗಿದೆ. ಇದರಲ್ಲಿ ಕೂಡಾ ಟಾರ್ಟ್ರಾಸೈನ್ ಸನ್ಸೆಟ್ ಯೆಲ್ಲೋ ಮತ್ತು ವಿಶೇಷವಾಗಿ ರೋಡಮೈನ್ ಬಿ ಬಳಸಲಾಗಿದೆ. ಕೃತಕ ಬಣ್ಣ ಬಳಕೆ ಮಾಡಿ ಕ್ಯಾಂಡಿ ತಯಾರು ಮಾಡಬಹುದು. ಆದರೆ ರೊಡಮೈನ್ ಬಿ, ಟಾರ್ಟ್ರಾಜಿನ್​ನಂತಹ ಯಾವುದೇ ಬಣ್ಣ ಬಳಸಬಾರದು. ಇದು ಆರೋಗ್ಯಕ್ಕೆ ಹಾನಿಕಾರಕ. ಇದು ಸಂಪೂರ್ಣ ಕಾನೂನು ಬಾಹಿರ. ಪಿಂಕ್ ಕಲರ್ ಬರಲು ರೊಡಮೈನ್ ಬಿ ಬಳಸುತ್ತಾರೆ. ಇನ್ಮುಂದೆ ಬಳಸುವಂತಿಲ್ಲ.

ಇದನ್ನು ಉಲ್ಲಂಘಿಸಿದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಡಿಯಲ್ಲಿ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜೊತೆಗೆ 10 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುವುದು ಎಂದರು.