ಬೆಂಗಳೂರು : ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲನೇ ಅಭ್ಯರ್ಥಿಯಾಗಿ ಜೈರಾಮ್ ರಮೇಶ್ ಹಾಗೂ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಿದರು. ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯಾಗಿರುವ ಎಂ.ಕೆ ವಿಶಾಲಾಕ್ಷಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯು.ಟಿ.ಖಾದರ್, ಜಮೀರ್ ಅಹಮದ್ ಖಾನ್ ಉಪಸ್ಥಿತರಿದ್ದರು.
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದ್ದು, ನಾಳೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಈಗಾಗಲೇ ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ಅಭ್ಯರ್ಥಿ ಆಗಿದ್ದಾರೆ. ಈ ಮೂವರ ಗೆಲುವು ನಿಶ್ಚಿತವಾಗಿದ್ದು, ನಾಲ್ಕನೇ ಅಭ್ಯರ್ಥಿಯಾಗಿ ಕಾಂಗ್ರೆಸ್ನಿಂದ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸಹ ಕಣಕ್ಕಿಳಿಯುವ ಸಿದ್ಧತೆ ನಡೆಸಿದ್ದಾರೆ. ನಾಲ್ಕನೇ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಅನಿವಾರ್ಯವಾಗಿದೆ.
ರಾಜ್ಯಸಭೆ ಅಭ್ಯರ್ಥಿಗಳಾಗಿ ಜಯರಾಮ್ ರಮೇಶ್ ಹಾಗೂ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ನಾಮಪತ್ರ ಸಲ್ಲಿಕೆ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಒಬ್ಬ ಸಜ್ಜನ ವ್ಯಕ್ತಿ. ಯುವಕನಿಗೆ ಎರಡನೇ ಅಭ್ಯರ್ಥಿಯನ್ನಾಗಿ ಸ್ಪರ್ಧಿಸಲು ಅವಕಾಶ ಕೊಟ್ಟಿದ್ದೇವೆ. ರಾಜ್ಯಸಭೆ ಚುನಾವಣೆಯಲ್ಲಿ ಎರಡನೇ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮತಗಳ ಕೊರತೆ ಎದುರಾದರೂ ಸಹ ಮನ್ಸೂರ್ ಅಲಿ ಖಾನ್ ಗೆಲ್ಲುತ್ತಾರೆ ಎಂಬ ವಿಶ್ವಾಸ ಇದೆ ಎಂದರು.
ಕರ್ನಾಟಕಕ್ಕೆ ಜೈರಾಮ್ ರಮೇಶ್ ಕೊಡುಗೆ ಏನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಅವರು ಕರ್ನಾಟಕ ಮೂಲದವರು, ಇಡೀ ರಾಷ್ಟ್ರಕ್ಕೆ ಪಕ್ಷದ ಮೂಲಕ ಉತ್ತಮ ಕೊಡುಗೆ ನೀಡಿದ್ದಾರೆ. ನಿಮ್ಮ ಕಣ್ಣಿಗೆ ಕಾಣದೇ ಇರಬಹುದು. ಆದರೆ, ಹಿನ್ನೆಲೆಯಲ್ಲಿ ಇದ್ದುಕೊಂಡೇ ಸಾಕಷ್ಟು ಕೆಲಸ ಮಾಡಿದ್ದಾರೆ ಎಂದು ಹೇಳಿದರು. ಜೆಡಿಎಸ್ ಬೆಂಬಲ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅವರು ನಮ್ಮಲ್ಲಿ ಬೆಂಬಲವನ್ನು ಕೋರಿದ್ದಾರೆ. ನಾವು ನಮಗೆ ಬೆಂಬಲ ನೀಡಿ ಎಂದು ಮನವಿ ಮಾಡಿದ್ದೇವೆ. ಮುಂದೆ ಏನಾಗಲಿದೆ ಎಂದು ನೋಡೋಣ ಎಂದು ಹೇಳಿದರು.










