ರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಜನವರಿ 22ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ…

47
firstsuddi

ನವದೆಹಲಿ: ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇಂದು ತಿಳಿಸಿದ್ದಾರೆ.

ಭಗವಾನ್ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವು ದೇಶದ ಜನರ ಭಾವನಾತ್ಮಕ ವಿಷಯವಾಗಿದೆ. ಹೀಗಾಗಿ ಅಂದಿನ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಸರ್ಕಾರಿ ನೌಕರರಿಗೂ ಅವಕಾಶ ನೀಡುವ ಸಲುವಾಗಿ ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ರಜೆ ನೀಡಲಾಗುವುದು ಎಂದು ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು / ಇಲಾಖೆಗಳಿಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಜನವರಿ 22ರಂದು ಮಧ್ಯಾಹ್ನ 12.30ಕ್ಕೆ, ರಾಮ ಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ-ಪ್ರತಿಷ್ಠಾ ಸಮಾರಂಭವು ಪ್ರಧಾನಿ ನರೇಂದ್ರ ಮೋದಿ ಮತ್ತು ಸಮಾಜದ ಎಲ್ಲಾ ವರ್ಗಗಳ ಹಲವಾರು ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಈ ರಾಮಮಂದಿರದಲ್ಲಿ ಧಾರ್ಮಿಕ ವಿಧಿವಿಧಾನಗಳು ಪ್ರಾರಂಭವಾಗಿದೆ. ಹಲವು ಕಾರ್ಯಕ್ರಮಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ.