ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ತನಿಖೆ ಸಿಸಿಬಿಗೆ ವರ್ಗಾವಣೆ…

39
firstsuddi

ಬೆಂಗಳೂರು: ದೇಶಾದ್ಯಂತ ಸುದ್ದಿಯಾಗಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ.

ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಬಾಂಬ್ ಸ್ಫೋಟದ ಬಗ್ಗೆ ಪ್ರಕರಣ ದಾಖಲಾಗಿತ್ತು. ಇದರ ತನಿಖೆಯನ್ನು ರಾಜ್ಯ ಸರ್ಕಾರವು ಸಿಸಿಬಿ ಹೆಗಲಿಗೆ ಒಪ್ಪಿಸಿದ್ದು, ತನಿಖಾಧಿಕಾರಿಯಾಗಿ ಎಸಿಪಿ ನವೀನ್ ಕುಲಕರ್ಣಿ ನೇಮಕಗೊಂಡಿದ್ದಾರೆ.

ಆರೋಪಿಯು ಬಿಎಂಟಿಸಿ ಬಸ್​ನಲ್ಲಿ ಬಂದು ಕೆಫೆಯಲ್ಲಿ ರವೆ ಇಡ್ಲಿ ತಿಂದು ಟೈಮರ್ ಬಾಂಬ್ ಇಟ್ಟು ಸ್ಫೋಟಕ್ಕೆ ಕಾರಣನಾಗಿದ್ದ. ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಸಿಸಿಟಿವಿ ಮೊರೆಹೋಗಿದ್ದಾರೆ. ಕ್ಯಾಪ್ ಧರಿಸಿ ಕನ್ನಡಕ ಹಾಕಿಕೊಂಡು ಮುಖ ಚಹರೆ ತಿಳಿಯದಂತೆ ಬಾಂಬ್ ಇಟ್ಟುಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅನುಮಾನಿತರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಎಲ್ಲರೂ ಸಹಕರಿಸಬೇಕೆಂದು ಕೋರಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಬೆನ್ನಲ್ಲೇ ಅಲರ್ಟ್ ಆಗಿರುವ ಪೊಲೀಸರು ರಾಜ್ಯ ವಿವಿಧ ಕಡೆಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರು ನಗರದ ಬಸ್ಸು ಮತ್ತು ರೈಲು ನಿಲ್ದಾಣಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಅಷ್ಟೇ ಅಲ್ಲದೆ, ರಾಜ್ಯದ ಎಲ್ಲಾ ಬಸ್ಸು ಮತ್ತು ರೈಲು ನಿಲ್ದಾಣಗಳಲ್ಲೂ ನಿಗಾ ಇಡಲು ಸೂಚನೆ ನೀಡಲಾಗಿದೆ. ರೈಲು ನಿಲ್ದಾಣಗಳಲ್ಲಿ ಭದ್ರತೆಗೆ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.