ಸೂರತ್: 2019ರ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಇಂದು ಏಪ್ರಿಲ್ 13ರ ವರೆಗೆ ಜಾಮೀನು ವಿಸ್ತರಿಸಿದೆ.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಇತ್ತೀಚೆಗೆ ತೀರ್ಪು ನೀಡಿದ್ದ ಸೂರತ್ ನ್ಯಾಯಾಲಯ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಸೂರತ್ ಜಿಲ್ಲಾ ನ್ಯಾಯಲಯದ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸೆಷನ್ಸ್ ನ್ಯಾಯಾಲಯಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಲಯ ಮೇ 3 ರಂದು ವಿಚಾರಣೆ ನಡೆಸಲಾಗುವುದು, ಏಪ್ರಿಲ್ 13ರ ವರೆಗೂ ಜಾಮೀನು ವಿಸ್ತರಿಸಿದೆ ಎಂದು ತಿಳಿಸಿದೆ.
2019ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು.
ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.










