ಬೆಂಗಳೂರು: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಟೆಂಡರ್ಗಾಗಿ ಲಂಚ ಪಡೆದ ಆರೋಪ ಸಂಬಂಧ ಇತ್ತೀಚೆಗಷ್ಟೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಪುತ್ರ ಮಾಡಾಳ್ ಪ್ರಶಾಂತ್ಗೂ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಬಿಜೆಪಿ ಶಾಸಕರ ಪುತ್ರ ಮಾಡಾಳ್ ಪ್ರಶಾಂತ್ ಅವರನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್) ಕಚೇರಿಯಲ್ಲಿ ತಂದೆಯ ಪರವಾಗಿ 40 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಮಾರ್ಚ್ 2 ರಂದು ಬಂಧಿಸಿದ್ದರು.
ಮಾಡಾಳ್ ಪ್ರಶಾಂತ್ ಬಂಧನದ ನಂತರ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆ ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ 8.23 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.










