ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರ್ಕಾರದ ನಿಲುವು ಸರಿಯಾಗಿದೆ: ಹೆಚ್.ವಿಶ್ವನಾಥ್.

30

ಮೈಸೂರು: ರಾಜ್ಯದ ಹಲವು ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ ಎಂದು ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರವಿದ್ದಾಗ ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ರೂಪಾಯಿ ಕೊಡುತ್ತಿದ್ದರು. ಅದು ಈಗಲೂ ಮುಂದುವರೆದಿದೆ. ಈ ವಿಚಾರ ಎಲ್ಲರಿಗೂ ಗೊತ್ತಿದೆ. ರಾಜ್ಯದಲ್ಲಿ ಅಕ್ಷರ, ಆರೋಗ್ಯ ಎರಡಕ್ಕೂ ಬೆಲೆ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತಿರುವ ವಿಚಾರವಾಗಿ ಮಾತನಾಡಿ, ಸಿದ್ದರಾಮಯ್ಯ ಸರ್ಕಾರದಲ್ಲಿ ಶಾಸಕಾಂಗಕ್ಕೆ ಬೆಲೆಯೇ ಇಲ್ಲದಂತಾಗಿದೆ. ಬಜೆಟ್ ಕುರಿತು ಶಾಸಕಾಂಗ ಒಪ್ಪಿಗೆ ನೀಡುತ್ತದೆ. ಆದರೆ, ಸರ್ಕಾರ ಶಾಸಕಾಂಗ ಒಪ್ಪಿಗೆ ನೀಡಿದ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಏನು ಮಾಡಿದೆ?. ಕಳೆದ ಬಾರಿಯ ಬಜೆಟ್ ಏನಾಯಿತು ಎಂದು ಪ್ರಶ್ನಿಸಿದರು. ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಹಾಗೂ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗದ ವಿಚಾರವಾಗಿ ಮಾತನಾಡಿ, ನಮ್ಮ ಹೆಂಡತಿಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ ಅಂತ ಗಂಡಂದಿರು ಹೇಳುತ್ತಿದ್ದಾರೆ. ಇದರಿಂದ ಮನೆಗಳು ಮುರಿದು ಹೋಗುವ ಪರಿಸ್ಥಿತಿ ಬಂದಿದೆ ಎಂದು ಹೇಳಿದರು.