ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕಗಳನಷ್ಟೇ ಪರಿಗಣಿಸುವಂತೆ ಪತ್ರದ ಮೂಲಕ ಸುರೇಶ್ ಕುಮಾರ್ ಮನವಿ…

91
firstsuddi

ಬೆಂಗಳೂರು : ವೃತ್ತಿಪರ ಕೋರ್ಸ್ ಗೆ ಪ್ರವೇಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಪಿಯುಸಿ ಫಲಿತಾಂಶ ಪರಿಗಣಿಸಿ ವೇಟೇಜ್ ನೀಡುವ ಪ್ರಕ್ರಿಯೆಯನ್ನು ಕೈಬಿಟ್ಟು, ಕೇವಲ ಸಿ.ಇ.ಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ಪರಿಗಣಿಸುವಂತೆ  ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಡಿಸಿಎಂ ಅಶ್ವತ್ಥ ನಾರಾಯಣರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಪತ್ರದಲ್ಲೇನಿದೆ? :

ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸುವ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ. ಕೋವಿಡ್ ಪ್ರಸರಣದ ತೀವ್ರತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಗಳ ನಡುವೆ ಸಮತೋಲನ ತರಲು ಈ ರೀತಿಯ ನಿರ್ಧಾರವು ಅವಶ್ಯಕವಾಗಿತ್ತು. ಅದನ್ನು ತಮ್ಮೊಂದಿಗೂ ನಾನು ಹಂಚಿಕೊಂಡಿದ್ದೇನೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ತೇರ್ಗಡೆ ಮಾಡುವ ನಿರ್ಧಾರದ ಹಿಂದೆ ನಾವು ನಿರ್ದಿಷ್ಟವಾದ ತರ್ಕವನ್ನು ಅನುಸರಿಸಿದ್ದೇವೆ. ಈ ವಿದ್ಯಾರ್ಥಿಗಳ ಪ್ರಥಮ ಪಿಯುಸಿ ಅಂಕಗಳಲ್ಲದೇ ಎಸ್ ಎಸ್ ಎಲ್ ಸಿ ಫಲಿತಾಂಶವನ್ನೂ ಪರಿಗಣಿಸಿ ಅದಕ್ಕೆ ಸಮನಾದ ಸೂಕ್ತ ಮೌಲ್ಯವನ್ನು ಸೇರ್ಪಡಿಸಿ ಗ್ರೇಡಿಂಗ್ ಫಲಿತಾಂಶವನ್ನು ನೀಡಲು ಸಹ ನಿರ್ಧಾರ ಮಾಡಿದ್ದೇವೆ. ಅಲ್ಲದೇ ಯಾವುದೇ ವಿದ್ಯಾರ್ಥಿಯು ತನ್ನ ಫಲಿತಾಂಶದ ಬಗ್ಗೆ ತೃಪ್ತಿ ಹೊಂದದೇ ಇದ್ದಲ್ಲಿ ಸೂಕ್ತ ಸಮಯದಲ್ಲಿ ನಡೆಸಲಾಗುವ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದಾಗಿದೆ ಎಂದೂ ಘೋಷಿಸಿದ್ದೇವೆ. ಇಂದಿನ ಸಂದರ್ಭದಲ್ಲಿ ಇದಕ್ಕಿಂತ ಪ್ರಸ್ತುತವಾದ ನಿರ್ಧಾರವನ್ನು ತೆಗೆದುಕೊಳ್ಳುವುದು ಕಷ್ಟ ಸಾಧ್ಯವಾಗಿರುತ್ತದೆ.

ಸಾಮಾನ್ಯವಾಗಿ ದ್ವಿತೀಯ ಪಿಯುಸಿ ಅಂಕಗಳನ್ನು ಸಿಇಟಿ ಪರೀಕ್ಷೆಗೆ ಪರಿಗಣಿಸಿ ಸೂಕ್ತ ವೇಟೇಜ್ ಕಲ್ಪಿಸುವ ಮೂಲಕ ಫಲಿತಾಂಶವನ್ನು ಘೋಷಿಸಲಾಗುತ್ತದೆ. ಈ ಬಾರಿಯ ಗ್ರೇಡಿಂಗ್ ಫಲಿತಾಂಶವು ವಿದ್ಯಾರ್ಥಿಗಳ ಪ್ರತಿಭೆಯನ್ನು ಖಚಿತವಾಗಿ ವ್ಯಕ್ತಪಡಿಸಿದರೂ ಅವರಿಗೆ ಅದನ್ನು ನಿರಾಕರಿಸಿ ಇನ್ನೊಮ್ಮೆ ಪರೀಕ್ಷೆ ಬರೆಯುವ ಅವಕಾಶವನ್ನು ಕಲ್ಪಿಸಲಿದೆ. ಹಾಗಾಗಿ ಈ ಬಾರಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಸಿಇಟಿ ಪರೀಕ್ಷೆಗೆ ಗಣನೆಗೆ ತೆಗೆದುಕೊಳ್ಳುವಾಗ, ಈ ಫಲಿತಾಂಶವನ್ನು ಪ್ರಶ್ನಿಸಿ ಇನ್ನೊಮ್ಮೆ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಬಹುದು ಎಂಬುದನ್ನು ಗಮನಿಸಬೇಕಾಗುತ್ತದೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಕೇವಲ ಸಿಇಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ರ್ಯಾಂಕಿಂಗ್ ಗೆ ಪರಿಗಣಿಸುವ ತೀರ್ಮಾನವನ್ನು ತೆಗೆದುಕೊಳ್ಳಬೇಕಾಗಿ ತಮ್ಮನ್ನು ಕೋರುತ್ತೇನೆ ಎಂದು ಪತ್ರ ಬರೆಯುವ ಮೂಲಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮನವಿ ಮಾಡಿದ್ದಾರೆ.