ಬೆಂಗಳೂರು: ನಗರದ ಅಂದ್ರಹಳ್ಳಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.
ಅಂದ್ರಹಳ್ಳಿ ಶಾಲೆ ಮುಖ್ಯ ಶಿಕ್ಷಕಿ ಲಕ್ಷ್ಮೀ ದೇವಮ್ಮ ಅವರನ್ನು ಅಮಾನತು ಮಾಡಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ನಗರದ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿ, ಕೆಲವು ವಿದ್ಯಾರ್ಥಿಗಳು ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವುದು ಕಂಡುಬಂದಿದೆ. ಘಟನೆಯ ನಂತರ, ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಆಗಮಿಸಿ, ಆವರಣದ ಹೊರಗೆ ಪ್ರತಿಭಟನೆ ನಡೆಸಿ, ಶಿಕ್ಷಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಕೂಡಲೇ ಶಾಲೆಗೆ ಆಗಮಿಸಿದ ಬೆಂಗಳೂರು ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ಅಂಜನಪ್ಪ ಅವರು, ಪರಿಶೀಲನೆ ನಡೆಸಿ, ತಪ್ಪಿತಸ್ಥ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.










