ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ವಸ್ತ್ರ ಸಂಹಿತೆ ಜಾರಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್.

58
firstsuddi

ನವದೆಹಲಿ : ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ವಸ್ತ್ರ ಸಂಹಿತೆ ಜಾರಿಗೊಳಿಸಲು ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು  ತಿರಸ್ಕರಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠ, ಈ ಪ್ರಕರಣ ನ್ಯಾಯಾಲಯಕ್ಕೆ ಬರಬೇಕಾದ ವಿಷಯವಲ್ಲ. ನಾವು ದೇಶಾದ್ಯಂತ ಏಕರೂಪದ ಶಾಲಾ ಸಮವಸ್ತ್ರವನ್ನು ಹೊಂದಲು ಸಾಧ್ಯವಿಲ್ಲ ಎಂದು ಹೇಳಿದೆ.

ಅರ್ಜಿದಾರ ನಿಖಿಲ್ ಉಪಾಧ್ಯಾಯ ಪರ ವಾದ ಮಂಡಿಸಿದ ಹಿರಿಯ ವಕೀಲ ಗೌರವ್ ಭಾಟಿಯಾ, ದೇಶಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಡ್ರೆಸ್ ಕೋಡ್ ನಲ್ಲಿ ಏಕರೂಪತೆಗಾಗಿ ಮನವಿ ಮಾಡಿದರು. ಆದರೆ ಪಿಐಎಲ್ ಅನ್ನು ವಿಚಾರಣೆಗೆ ಸ್ವೀಕರಿಸಲು ನ್ಯಾಯಪೀಠ ಒಪ್ಪದ ಕಾರಣ ಅರ್ಜಿದಾರರು ಅರ್ಜಿಯನ್ನು ಹಿಂಪಡೆದರು.

ಸದ್ಯ ಇದೇ ಪೀಠವು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸುತ್ತಿದೆ.