ಸಚಿವ ಉಮೇಶ್ ಕತ್ತಿ ನಿಧನಕ್ಕೆ ಗಣ್ಯರ ಸಂತಾಪ…

45
firstsuddi

ಬೆಂಗಳೂರು : ಆಹಾರ, ನಾಗರಿಕ ಪೂರೈಕೆ ಹಾಗು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ಕರ್ನಾಟಕದ ಅಭಿವೃದ್ಧಿಗೆ ಶ್ರೀ ಉಮೇಶ್ ಕತ್ತಿ ಜೀ ಅವರು ಉತ್ಕೃಷ್ಟ ಕೊಡುಗೆ ನೀಡಿದ್ದು, ಅವರು ಓರ್ವ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಈ ದುರಂತದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗಿವೆ ಎಂದು ಬರೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದು, ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಉಮೇಶ್ ಕತ್ತಿ ಅವರ ನಿಧನ ರಾಜ್ಯಕ್ಕೆ, ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ಸುದ್ದಿ ನೋವು ತರಿಸಿದೆ. ಭಗವಂತ ಅವರ ಕುಟುಂಬಕ್ಕೆ, ಕ್ಷೇತ್ರದ ಜನತೆಗೆ ನೋವು ತಡೆದುಕೊಳ್ಳುವ ಶಕ್ತಿ ಭರಿಸಲಿ. 9 ಬಾರಿ ಶಾಸಕರಾಗಿ, 4 ಬಾರಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ನಾನು ಸಹ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರುಗಳಲ್ಲಿ ಒಬ್ಬರಾಗಿದ್ದ ಕತ್ತಿ ಅವರು ಅತ್ಯಂತ ಅನುಭವಿ ಹಾಗೂ ಉತ್ಸಾಹಿ ರಾಜಕಾರಣಿಯಾಗಿದ್ದರು. ಉತ್ತರ ಕರ್ನಾಟಕ ಭಾಗದ ಜನತೆಯ ಧ್ವನಿಯಾಗಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ ತಿಳಿಸಿದ್ದಾರೆ.

ಕತ್ತಿ ಅವರ ಅಗಲಿಕೆ ಬಿಜೆಪಿ ಪಕ್ಷಕ್ಕೆ ಹಾಗೂ ರಾಜ್ಯದ ಜನತೆಗೆ ತುಂಬಲಾರದ ನಷ್ಟ ಎಂದು ಸಿ.ಟಿ.ರವಿ ಸಂತಾಪ ಸೂಚಿಸಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದು, ಉಮೇಶ್ ಕತ್ತಿ ಅವರ ಅಕಾಲಿಕ ನಿಧನ ಅತೀವ ದುಖವನ್ನುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ. ನಿಧನದ ದುಃಖವನ್ನು ಸಹಿಸುವ ಶಕ್ತಿಯನ್ನು ಬಂಧು ಮಿತ್ರರಿಗೆ ನೀಡಲಿ ಎಂದು ಬರೆದುಕೊಂಡಿದ್ದಾರೆ.