ಚಿತ್ರದುರ್ಗ: ಸಾರಿಗೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಿಂದಾಗಿ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರಿನ ಗೊಲ್ಲಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 150 (ಎ)ನಲ್ಲಿ ನಡೆದಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮದ್ಯೆ ನಿಧನರಾಗಿದ್ದಾರೆ. ಮತ್ತೊಬ್ಬರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಮೃತರನ್ನು ರಾಯಚೂರಿನ ಮಾಬಮ್ಮ(35), ಮಸ್ಕಿ ಮೂಲದ ರಮೇಶ್(40), ಬೆಂಗಳೂರು ಮೂಲದ ಪಾರ್ವತಮ್ಮ(45) ಎಂದು ಗುರುತಿಸಲಾಗಿದೆ. ಮತ್ತಿಬ್ಬರ ಗುರುತು ಪತ್ತೆಯಾಗಿಲ್ಲ. ಬಸ್‌ನಲ್ಲಿದ್ದ ಆರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಅಪಘಾತದ ಬಳಿಕ ಲಾರಿ ಚಾಲಕ, ಲಾರಿ ಸಮೇತ ಪರಾರಿಯಾಗಿದ್ದಾನೆ.
ಈ ಕುರಿತು ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










