ಸಿಎಂ ಬೊಮ್ಮಾಯಿಗೆ ಹುಟ್ಟುಹಬ್ಬದ ಸಂಭ್ರಮ – ಶುಭಕೋರಿದ ಅಮಿತ್ ಶಾ, ಬಿಎಸ್‍ವೈ.

80
firstsuddi

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 62ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಪುಟ ಸಹೋದ್ಯೋಗಿಗಳು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ‘ಮುಖ್ಯಮಂತ್ರಿಗಳು, ಆತ್ಮೀಯರೂ ಆಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ಟ್ವೀಟ್ ಮಾಡಿ ಸಿಎಂಗೆ ಶುಭಾಶಯ ಕೋರಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳು, ಜನಾನುರಾಗಿ ಜನಸೇವಕರು ಹಾಗೂ ನಮ್ಮೆಲ್ಲರ ಮಾರ್ಗದರ್ಶಕರಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು ಎಂದು ಹಾರೈಸಿದ್ದಾರೆ.

ಹುಟ್ಟುಹಬ್ಬದ ನಿಮಿತ್ತ ಸಿಎಂ ಬೊಮ್ಮಾಯಿ ಅವರು ತಮ್ಮ ಆರ್.ಟಿ ನಗರ ನಿವಾಸದಲ್ಲಿ ಕುಟುಂಬದ ಸದಸ್ಯರ ಜತೆಯಲ್ಲಿ ಗೋಪೂಜೆ ನೆರವೇರಿಸಿ ದೇಸಿ ಶೈಲಿಯಲ್ಲಿ ಸರಳವಾಗಿ ಹುಟ್ಟುಹಬ್ಬದ ಆಚರಣೆ ಮಾಡಿದರು.