ಸಿದ್ದರಾಮಯ್ಯ ಕುರಿತ ಹೇಳಿಕೆ – ಟ್ವೀಟ್ ಮೂಲಕ ವಿಷಾದ ವ್ಯಕ್ತಪಡಿಸಿದ ಅಶ್ವತ್ಥ್ ನಾರಾಯಣ್.

56
firstsuddi

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ನೀಡಿದ್ದ ಹೇಳಿಕೆಗೆ ಸಚಿವ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ನಲ್ಲೇನಿದೆ? : ಮಂಡ್ಯ ದಲ್ಲಿ ಟಿಪ್ಪು-ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ. ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗವಾಗಿದೆ. ನಾನು ಆಡಿರುವ ಮಾತುಗಳನ್ನು ಆ ಚೌಕಟ್ಟಿನಲ್ಲೇ ನೋಡಬೇಕು. ಇದು ಆರೋಗ್ಯಕರ ಪ್ರಜಾತಂತ್ರಕ್ಕೆ ಅಗತ್ಯವಾಗಿದೆ.

ಸಾಂದರ್ಭಿಕವಾಗಿ ಆಡು ಭಾಷೆಯಲ್ಲಿ ಸೋಲಿಸಿ ಎಂಬ ಅರ್ಥದಲ್ಲಿ ಹೇಳಿರುವ ಮಾತನ್ನು ತಮಗೆ ಬೇಕಾದ ಹಾಗೆ ಅರ್ಥೈಸಿಕೊಂಡು, ಮಾತನಾಡುತ್ತಿರುವ ಸಿದ್ದರಾಮಯ್ಯ ಅವರ ಭಾಷಾ ಪ್ರಾವೀಣ್ಯತೆ, ಅವರು ಬಳಸುವ (ಗ್ರಾಮೀಣ!) ಪದಗಳು ಏನೆಂಬುದನ್ನು ರಾಜ್ಯದ ಜನತೆಯೇ ನೋಡಿದೆ. ಅಷ್ಟಕ್ಕೂ, ಟಿಪ್ಪುವಿನಲ್ಲಿರುವ ಕಟುಕತನದ ಮನಸ್ಥಿತಿ ನಮ್ಮ ಮಂಡ್ಯದ ಜನತೆಗೆ ಇಲ್ಲ.

ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು ಸಿದ್ದರಾಮಯ್ಯ ಅವರ ಸಂಸ್ಕೃತಿ ಆಗಿರಬಹುದು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಅಶ್ವತ್ಥ್ ನಾರಾಯಣ್ ಹೇಳಿದ್ದೇನು ?: ಮಂಡ್ಯದ ಸಾತನೂರು ಗ್ರಾಮದಲ್ಲಿ ನಿನ್ನೆ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುವ ಭರದಲ್ಲಿ, ಟಿಪ್ಪುವಿನ ಜಾಗಕ್ಕೆ ಸಿದ್ದರಾಮಯ್ಯ ಬಂದು ಬಿಡುತ್ತಾರೆ. ನಿಮಗೆ ಸಾವರ್ಕರ್ ಬೇಕಾ, ಟಿಪ್ಪು ಬೇಕಾ? ಎಂಬುದನ್ನು ನೀವೇ ತೀರ್ಮಾನಿಸಿ. ಹುರಿಗೌಡ, ನಂಜೇಗೌಡ ಅವರು ಟಿಪ್ಪುವಿಗೆ ಏನು ಮಾಡಿದ್ರು ಅನ್ನೋದು ನಿಮಗೆ ಗೊತ್ತಿದೆ. ಅದೇ ರೀತಿ ಇವರನ್ನು ಹೊಡೆದು ಹಾಕಬೇಕು. ರಾಜ್ಯದಲ್ಲಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದಿದ್ದರು. ಇದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸಚಿವ ಅಶ್ವತ್ಥ್ ನಾರಾಯಣ್ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಆತ ಮನುಷ್ಯನೋ ರಾಕ್ಷಸನೋ ನೀವೇ ತಿಳಿದುಕೊಳ್ಳಿ. ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದವರನ್ನು ಬೆಂಬಲಿಸುವ ಪಕ್ಷದ ಅಶ್ವತ್ಥ್ ನಾರಾಯಣ್ ಅವರಿಂದ ಇಂಥ ಹೇಳಿಕೆ ಮೂಡಿಬಂದಿರುವುದರಿಂದ ಅಚ್ಚರಿಯಿಲ್ಲ. ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ಸಚಿವರ ವಿರುದ್ಧ ಈವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಅವರ ಸರ್ಕಾರ ನಿದ್ರಿಸುತ್ತಿದೆ. ಅಶ್ವತ್ಥ್ ನಾರಾಯಣ್ ಮಾನಸಿಕ ಅಸ್ವಸ್ಥನಾಗಿದ್ದಾನೆ ಎಂದು ಏಕವಚನದಲ್ಲಿ ಟ್ವೀಟ್ ಮಾಡಿದ್ದರು.