ಸ್ಯಾಂಟ್ರೋ ರವಿಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ : ಬೊಮ್ಮಾಯಿ.

69
firstsuddi

ಹುಬ್ಬಳ್ಳಿ : ಸ್ಯಾಂಟ್ರೋ ರವಿ ವಿರುದ್ಧದ ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಆತನ ಎಲ್ಲಾ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಸ್ಯಾಂಟ್ರೋ ರವಿಗೆ 20 ವರ್ಷದ ಇತಿಹಾಸ ಇದೆ. ಕಾಂಗ್ರೆಸ್ ಕಾಲದಲ್ಲೇ ಆತ ಜೈಲಿನಿಂದ ಹೊರಬಂದಿದ್ದಾನೆ. ಸ್ಯಾಂಟ್ರೋ ರವಿ ಬಗ್ಗೆ ಎಲ್ಲಾ ರೀತಿಯ ತನಿಖೆಗೆ ಆದೇಶಿಸಿದ್ದೇನೆ. ತನಿಖೆಯಿಂದ ಸತ್ಯ ಹೊರಬರಲಿದೆ ಎಂದರು.

ಮೀಸಲಾತಿ ವಿಚಾರವಾಗಿ ಪ್ರತಿಕ್ರಿಯಿಸಿ, ಸಂವಿಧಾನಬದ್ದವಾಗಿ ಮೀಸಲಾತಿ ಮಾಡಬೇಕು. ಹಿಂದುಳಿದ ವರ್ಗಗಳ ಆಯೋಗದ ವರದಿ ಬಹಳ ಮುಖ್ಯ. ಹೀಗಾಗಿ ಅವರ ವರದಿಗಾಗಿ ಕಾಯುತ್ತಿದ್ದೇವೆ ಎಂದರು. ಮಹದಾಯಿ ವಿಚಾರವಾಗಿ ಅರಣ್ಯ ಇಲಾಖೆ ಸ್ಪಷ್ಟನೆ ಕೇಳೋದು ಸಾಮಾನ್ಯ. ಈ ಹಿಂದೆ ಸಾಕಷ್ಟು ವಿಚಾರದಲ್ಲಿ ಸ್ಪಷ್ಟನೆ ಕೇಳಿದ್ದಾರೆ. ನಾವು ಸಮರ್ಥವಾಗಿ ಉತ್ತರ ನೀಡುತ್ತೇವೆ ಎಂದು ತಿಳಿಸಿದರು.

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ನಡೆಯುವ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಇದಕ್ಕೆ ಮಹತ್ವ ನೀಡಲಾಗಿದ್ದು, ಮಾನವ ಸಂಪನ್ಮೂಲವೇ ಬಹುದೊಡ್ಡ ಕೊಡುಗೆ ಎಂದು ಪ್ರಧಾನಿ ಮೋದಿ ಆಶಯ ವ್ಯಕ್ತಪಡಿಸಿದ್ದಾರೆ ಎಂದರು.

ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡುವುದು ವೈಯಕ್ತಿಕ ವಿಚಾರ. ನಾನು ವ್ಯಾಖ್ಯಾನ ಮಾಡುವುದಿಲ್ಲ. ಎಲ್ಲೆಡೆ ನಿಲ್ಲಲು ಅವರು ಸರ್ವ ಸ್ವತಂತ್ರರು. ಆದರೆ ತೀರ್ಮಾನವನ್ನು ಕೋಲಾರದ ಜನತೆ ಮಾಡುತ್ತಾರೆ ಎಂದು ತಿಳಿಸಿದರು.