ಹೈದರಾಬಾದ್: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಬೆನ್ನಲ್ಲೇ ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಅವರಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದು ವರದಿಯಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಿಧು ಹತ್ಯೆಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕಾರಣವೆಂದು ಅನುಮಾನ ವ್ಯಕ್ತ ಪಡಿಸಲಾಗುತ್ತಿದೆ. ಬಿಷ್ಣೋಯ್ ಸದ್ಯ ತಿಹಾರ್ ಜೈಲಿನಲ್ಲಿದ್ದರೂ, ಅಲ್ಲಿಂದಲೇ ಅವರನ್ನು ಕೊಲ್ಲಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ನಟ ಸಲ್ಮಾನ್ ಖಾನ್ ಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎನ್ನಲಾಗ್ತಿದೆ.
2018ರಲ್ಲಿ ರಾಜಸ್ಥಾನದಲ್ಲಿ ಕೃಷ್ಣಮೃಗ ಬೇಟೆ ಆಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ಜೈಲಿಗೆ ಹೋಗಿದ್ದರು. ಈ ಸಮಯದಲ್ಲಿ ಕೋರ್ಟ್ ಹೊರಗೆ ಮಾತನಾಡಿದ್ದ ಬಿಷ್ಣೋಯ್, ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಕೃಷ್ಣಮೃಗವನ್ನ ಬಿಷ್ಣೋಯ್ ಗಳು ಪವಿತ್ರ ಎಂದು ನಂಬುತ್ತಾರೆ. ಈ ಕಾರಣದಿಂದಾಗಿ ಸಲ್ಮಾನ್ ಖಾನ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗುತ್ತಿದೆಯಂತೆ. ಜೊತೆಗೆ ಅವರ ಮನೆಯ ಸುತ್ತಲೂ ಹೆಚ್ಚಿನ ಪೊಲೀಸರು ಗಸ್ತು ತಿರುಗುತ್ತಿದ್ದಾರೆ ಎಂದು ವರದಿಯಾಗಿದೆ.










