ಹಾಸನ : ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರತಿಭಟನೆಗೆ ಜೆ.ಡಿ.ಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಅವರು ಬೆಂಬಲ ಘೋಷಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರ ಬಂಧನವನ್ನು ನಾನು ಖಂಡಿಸುತ್ತೇನೆ. ಹಬ್ಬ ಇದ್ದರೂ ಕೂಡಾ ಬಿಡದೇ ವಿಚಾರಣೆ ನಡೆಸಿದ್ದಾರೆ. ಇದೊಂದು ರಾಜಾಕೀಯ ಪ್ರೇರಿತ ಎಂದು ಮೇಲ್ನೋಟಕ್ಕೆ ಕಾಣುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ. ವಿರೋಧ ಪಕ್ಷಗಳನ್ನು ಅಳಿಯೋದಕ್ಕೆ ಪ್ರಯತ್ನಿಸುತ್ತಿದೆ. ಇದು ಮಾನಸಿಕವಾಗಿ ಕುಗ್ಗಿಸುವ ಕೆಲಸ ಆಗುತ್ತದೆ. ಕಾಂಗ್ರೆಸ್ ಪ್ರತಿಭಟನೆಗೆ ಜೆಡಿಎಸ್ ಬೆಂಬಲ ನೀಡುತ್ತದೆ. ಕಾಂಗ್ರೆಸ್ ಕಾರ್ಯಕರ್ತರು ಎಲ್ಲೆಲ್ಲಿ ಪ್ರತಿಭಟನೆ ಮಾಡುತ್ತಾರೋ ಅಲ್ಲೆಲ್ಲಾ ಜೆಡಿಎಸ್ ಕಾರ್ಯಕರ್ತರು ಹೋಗಿ ಪ್ರತಿಭಟನೆ ಮಾಡುತ್ತಾರೆ. ಡಿ.ಕೆ.ಶಿವಕುಮಾರ್ ಅವರನ್ನು ಬಂಧನ ಮಾಡಿರುವುದು ಪ್ರಜಾಪ್ರಭುತ್ವದ ವಿರೋಧಿ ಕ್ರಮವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಮುನ್ನೆಲೆಯಲ್ಲಿರುವ ಕೆಲವರಲ್ಲಿ ಡಿಕೆಶಿ ಕೂಡಾ ಒಬ್ಬರು. ಬಿಜೆಪಿ ಸರ್ಕಾರ ರಚನೆ ವೇಳೆ ಡಿಕೆಶಿ ಪ್ರಬಲವಾಗಿ ವಿರೋಧಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡಾ ಅವರ ಬಂಧನಕ್ಕೆ ಕಾರಣವಾಗಿದೆ. ವಿಳಂಬವಾಗಿ ಬಂಧಿಸಿರುವುದರಿಂದ ರಾಜಕೀಯ ವಾಸನೆ ಇದೆ ಎಂದು ಹೇಳಿದರು.









