ಶಿಮ್ಲಾ : ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸೋಲು ಕಂಡ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಹಾಲಿ ಸಿಎಂ ಜೈರಾಮ್ ಠಾಕೂರ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಜೈರಾಮ್ ಠಾಕೂರ್ ಅವರು ಇಂದು ಸಂಜೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಠಾಕೂರ್, ನಾನು ನನ್ನ ರಾಜೀನಾಮೆಯನ್ನು ರಾಜ್ಯಪಾಲರಿಗೆ ನೀಡಿದ್ದೇನೆ. ಜನರ ಅಭಿವೃದ್ಧಿಗಾಗಿ ಕೆಲಸ ಮಾಡುವುದನ್ನು ಎಂದಿಗೂ ನಿಲ್ಲಿಸುವುದಿಲ್ಲ. ನಾವು ಸೋಲಿನ ಪರಾಮರ್ಶೆ ಮಾಡಬೇಕಾಗಿದೆ ಎಂದು ಹೇಳಿದರು.
68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ 25 ಸ್ಥಾನ ಪಡೆದರೆ, ಪ್ರತಿಪಕ್ಷ ಕಾಂಗ್ರೆಸ್ 40 ಸ್ಥಾನಗಳಲ್ಲಿ ಗೆದ್ದಿದೆ.










