ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಪಿಐಎಲ್ ವಜಾಗೊಂಡಿದ್ದು, ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ನ್ಯಾಯಾಲಯವೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ. ಇದು ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಎಂದಿದ್ದಾರೆ.
ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ ಮತ್ತು ರಾಜ್ಯ ಆರೋಗ್ಯ ಇಲಾಖೆ ರೂಪಿಸಿದ ಎಸ್ ಒ ಪಿ ಪಾಲನೆಗಳಂತಹ ಉಪಕ್ರಮಗಳ ಕುರಿತಂತೆ ಸರ್ಕಾರದ ವೈಜ್ಞಾನಿಕ ಆಲೋಚನೆಗಳನ್ನು ಪುರಸ್ಕರಿಸಿ, ಇದು ಇಡೀ ರಾಷ್ಟ್ರಕ್ಕೆ ಮಾದರಿಯಾದ ಉಪಕ್ರಮವಾಗಿದೆ ಎಂದಿರುವ ಹೈಕೋರ್ಟ್ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದನ್ನು ತುಂಬು ಮನಸ್ಸಿನಿಂದ ಶ್ಲಾಘಿಸಿದೆ. ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್ ಸಕಾಲಿಕ ನಿರ್ಧಾರವನ್ನು ಕೈಗೊಂಡಿದ್ದು, ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದಂತಾಗಿದೆ ಎಂದು ತಿಳಿಸಿದ್ದಾರೆ.










